ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ : ಇಲ್ಲಿದೆ ಪ್ರವಾಸದ ವಿವರ

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಕರಾವಳಿ ಜಿಲ್ಲೆ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 2.20 ಕ್ಕೆ ಕೇರಳದ ಕಣ್ಣೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರಮಂಗಲಕ್ಕೆ ಆಗಮಿಸಲಿದ್ದು, 3.15 ಕ್ಕೆ ಈಶ್ವರಮಂಗಲದಲ್ಲಿ ನಿರ್ಮಿಸಲಾಗಿರುವ ಅಮರಜ್ಯೋತಿ ಭಾರತ ಮಾತೆ ದೇಗುಲ ಉದ್ಘಾಟಿಸಲಿದ್ದಾರೆ.
ಬಳಿಕ 3.40 ಕ್ಕೆ ಪುತ್ತೂರಿನಲ್ಲಿ ಕ್ಯಾಂಪ್ಕೋ ಮಹೋತ್ಸವ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 5.40 ಕ್ಕೆ ಪುತ್ತೂರಿನಿಂದ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದು, 6.15 ರಿಂದ 8 ಗಂಟೆಯವರೆಗೆ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಜೆಪಿ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.
ಪುತ್ತೂರಿನ ಕಾರ್ಯಕ್ರಮ ಮುಗಿಸಿಕೊಂಡು ಮಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಅವರು ಕಾವೂರಿನಿಂದ ಪದವಿನಂಗಡಿವರೆಗೆ ರೋಡ್ ನಡೆಸಬೇಕಿತ್ತು. ಆದರೆ ಅವರು ಸಾಗುವ ಮಾರ್ಗದಲ್ಲಿ ಕೊರಗಜ್ಜ ದೈವದ ಕೋಲ ನಡೆಯಲಿರುವ ಹಿನ್ನೆಲೆಯಲ್ಲಿ ರೋಡ್ ಶೋ ರದ್ದುಪಡಿಸಲಾಗಿದೆ.
ಮದ್ಯ ಮಾರಾಟ ನಿಷೇಧ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳ ನಿಮಿತ್ತ ಪುತ್ತೂರು ವಲಯ ವ್ಯಾಪ್ತಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.