ಜ.19 ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ : ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಜ.19 ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ : ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಐತಿಹಾಸಿಕ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ಕಲಬುರಗಿಗೆ ಆಗಮಿಸಲಿದ್ದಾರೆ.

ಸೇಡಂ ತಾಲೂಕಿನ ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡುವರು.

ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ: ಪ್ರಧಾನಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರ ವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ-ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ. ಅಲ್ಲದೇ ಪ್ರತಿ ಕಚೇರಿಯಲ್ಲಿ ಶೇ.100ರ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಅಗತ್ಯ. ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಡಿ.ಸಿ. ಯಶವಂತ ವಿ. ಗುರುಕರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.