ಕೋವಿಡ್ ಹೆಚ್ಚಳ: ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ಕೋವಿಡ್ ಹೆಚ್ಚಳ: ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ನವದೆಹಲಿ: ಓಮೈಕ್ರಾನ್ ಒಳಗೊಂಡಂತೆ ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಸತತವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ, ಕೋವಿಡ್ ಹೆಚ್ಚಳವನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಕರ್ನಾಟಕ, ಹರಿಯಾಣ, ದೆಹಲಿ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ ಹೆಚ್ಚಳವನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದು, ಪೂರ್ವ ಸನ್ನದ್ಧತೆಯ ಭಾಗವಾಗಿ ಆಸ್ಪತ್ರೆ ಸೌಲಭ್ಯವನ್ನು ವೃದ್ಧಿಸುವುದು ಮತ್ತು ಕೋವಿಡ್ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲು ಸೂಚಿಸಲಾಗಿದೆ.

ಭಾರತದಲ್ಲಿ ಗುರುವಾರ 13,154 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. 24 ಗಂಟೆ ಅವಧಿಯಲ್ಲಿ 268 ಮಂದಿ ಮೃತಪಟ್ಟಿದ್ದಾರೆ.

ಏತನ್ಮಧ್ಯೆ ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ. ಇದುವರೆಗೆ 21 ರಾಜ್ಯಗಳಲ್ಲಿ ಓಮೈಕ್ರಾನ್ ಪ್ರಕರಣಗಳು ಕಂಡುಬಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.