ಡಿಕೆಶಿ ಸರಣಿ ಸಭೆ : ಪಕ್ಷದ ಪದಾಧಿಕಾರಿಗಳ ನೇಮಕದ ಬಗ್ಗೆ ಸಮಾಲೋಚನೆ

ಬೆಂಗಳೂರು, ಜೂ.26- ಮುಂದಿನ ಮುಖ್ಯಮಂತ್ರಿ ವಿವಾದ ತಣ್ಣಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದ್ದು, ಸರಣಿ ಸಭೆಗಳನ್ನು ನಡೆಸಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಸಭೆ ನಡೆಸಿ ಪಕ್ಷದ ಪದಾಧಿಕಾರಿಗಳ ನೇಮಕದ ಬಗ್ಗೆ ಸಮಾಲೋಚನೆ ನಡೆಸಿದರು. ಪಕ್ಷ ಸಂಘಟನೆಗಾಗಿ ವಿಭಾಗವಾರು ಉಸ್ತುವಾರಿಗಳನ್ನು ನೇಮಿಸುವುದು, ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಸಕ್ರಿಯರಾಗಿಲ್ಲದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಕುರಿತು ಚರ್ಚಿಸಲಾಗಿದೆ.
ಕೆಪಿಸಿಸಿಗೆ ಕಳೆದ ಎರಡು ವರ್ಷಗಳಿಂದ ಪದಾಧಿಕಾರಿಗಳ ನೇಮಕವಾಗಿಲ್ಲ. ಇತ್ತೀಚೆಗೆ ತಾವು ತಯಾರಿಸಿದ್ದ ಪದಾಧಿಕಾರಿಗಳ ಪಟ್ಟಿಯನ್ನು ಡಿ.ಕೆ.ಶಿವಕುಮಾರ್ ದೆಹಲಿಗೆ ತೆಗೆದುಕೊಂಡು ಅನುಮತಿಗಾಗಿ ಹೈಕಮಾಂಡ್ ಗೆ ಸಲ್ಲಿಸಿದ್ದರು. ಆದರೆ ಅದಕ್ಕೆ ಅನುಮತಿ ನೀಡುವ ಬದಲಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಹಿರಿಯ ನಾಯಕರ ಜೊತೆ ಮತ್ತೊಮ್ಮೆ ಸಮಾಲೋಚನೆ ನಡೆಸುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಸಭೆ ನಡೆಸಿದ್ದರು.
ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಧೃವನಾರಾಯಣ್, ಸಲಿಂ ಅಹಮದ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜುಲೈ ತಿಂಗಳು ಪೂರ್ತಿಯಾಗಿ ಪ್ರತಿಭಟನೆ, ಜನ ಜಾಗೃತಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಪಿಸಿಸಿಗೆ ಸೂಚನೆ ನೀಡಿದೆ. ಕೋವಿಡ್ ಸಂದರ್ಭದಲ್ಲಿನ ವೈಪಲ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಔಟ್ ರಿಚ್ ಕಾರ್ಯಕ್ರಮ ರೂಪಿಸಲಾಗಿದೆ. ಅದರ ಪೂರ್ವ ಸಿದ್ಧತೆಗಳ ಬಗ್ಗೆ ಸಂಜೆ ಮಹತ್ವದ ಸಭೆ ನಡೆಯಲಿದೆ.
ಕರ್ನಾಟಕ ಕಾಂಗ್ರೆಸ್ ನ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನ ರಣದೀಪ್ ಸುರ್ಜೇವಾಲಾ ವಚ್ಯುವಲ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.