ತಿ. ನರಸೀಪುರದಲ್ಲಿ ಚಿರತೆಯನ್ನು ಕೂಡಲೇ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ : ಸಿಎಂ ಬೊಮ್ಮಾಯಿ ಸೂಚನೆ

ತಿ. ನರಸೀಪುರದಲ್ಲಿ ಚಿರತೆಯನ್ನು ಕೂಡಲೇ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆ ದಾಳೆ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಚರ್ಚಿಸಿ, ಚಿರತೆ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಿದರು.

ತಿ. ನರಸೀಪುರ ತಾಲ್ಲೂಕಿನಲ್ಲಿ ಸಂಭವಿಸಿದ ಚಿರತೆ ದಾಳಿ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಚಿರತೆ ಸೆರೆ ಹಿಡಿಯಲು 158 ಮಂದಿ ಕೆಲಸ ಮಾಡುತ್ತಿದ್ದಾರೆ. ಕೋಂಬಿಂಗ್ ಆಪರೇಷನ್ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪ್ರಕರಣ ಸಂಭವಿಸಿದ 3-4 ಕಿ.ಮೀ. ಸುತ್ತಳತೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆ ನಡೆಸಲು ಸೂಚಿಸಿದರು. ಚಿರತೆ ದಾಳಿಯಿಂದಾಗಿ ತಿ. ನರಸೀಪುರ ತಾಲ್ಲೂಕಿನ 21 ಹಳ್ಳಿಗಳು ಬಾಧಿತವಾಗಿದೆ. ಈ ಹಳ್ಳಿಗಳಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳೀಯರ ನೆರವು ಪಡೆಯುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ ನೆರವು ಪಡೆಯಲು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.