ಜನಪ್ರತಿನಿಧಿಗಳ ಸಲಹೆ ಪಡೆದು ಯೋಜನೆ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಹುಬ್ಬಳ್ಳಿ-ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ ೨೪/೭ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿ ಚುರುಕುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿ ಸೂಚಿಸಿದರು. ನಿರಂತರ ನೀರು ಪೂರೈಕೆ ಯೋಜನೆಯ ಕುರಿತು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ರವಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ ಆ್ಯಂಡ್ ಟಿ ಸಂಸ್ಥೆಯು ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಗತಿ ಮಾಹಿತಿ ನೀಡಬೇಕು. ಸ್ಥಳೀಯ ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ಜಲ ಸಂಗ್ರಹಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೂಡಲೇ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಬೇಕು. ಕೆಯುಐಡಿಎಫ್ಸಿ ಹಾಗೂ ಎಲ್ ಆ್ಯಂಡ್ ಟಿ ಸಂಸ್ಥೆಗಳು ಜಂಟಿಯಾಗಿ ನ್ಯಾಯಾಲಯಕ್ಕೆ ಉತ್ತರ ನೀಡಲಿ ಎಂದರು.
ಆಡಳಿತ ವ್ಯವಸ್ಥೆ, ಹಣಕಾಸು ನಿರ್ವಹಣೆಯಲ್ಲಿ ವಿಕೇಂದ್ರೀಕರಣ ಮಾಡಿ ತ್ವರಿತತೆ ತರಬೇಕು. ಇದು ಯಾವುದೇ ಕಟ್ಟಡ ಕಾಮಗಾರಿಯಲ್ಲ. ಸಾರ್ವಜನಿಕರಿಗೆ ಅಗತ್ಯವಾಗಿರುವ ಕುಡಿಯುವ ನೀರಿನ ಯೋಜನೆಯಾಗಿದೆ. ಗುತ್ತಿಗೆ ಸಂಸ್ಥೆಯು ತನ್ನ ಸಮಸ್ಯೆಗಳನ್ನು ನಿರ್ವಹಿಸಿಕೊಳ್ಳುವ ಸಾಮರ್ಥ್ಯದೊಂದಿಗೆ ಮುನ್ನಡೆಯಬೇಕು ಎಂದರು. ಜಿಲ್ಲಾಡಳಿತ, ಸರ್ಕಾರವೂ ಆ ನಿಟ್ಟಿನಲ್ಲಿ ಸಹಕರಿಸಲಿದೆ ಎಂದು ಭರವಸೆ ನೀಡಿದ ಅವರು, ಯೋಜನೆ ಅನುಷ್ಠಾನ ತೃಪ್ತಿಕರವಾಗಿರದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ಇದು ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಅನುಷ್ಠಾನದಲ್ಲಿ ಉದಾಸೀನ ಮನೋಭಾವ ತಾಳಬಾರದು. ಕೆಲವೆಡೆ ೬ ರಿಂದ ೮ ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿರುವ ಬಗ್ಗೆ ನಾಗರಿಕರಿಂದ ದೂರುಗಳು ಬರುತ್ತಿವೆ. ಕೆಯುಡಿಎಫ್ಸಿ ಹಾಗೂ ಎಲ್ ಆ್ಯಂಡ್ ಟಿ ಸಂಸ್ಥೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಗಣಿ,ಭೂವಿಜ್ಞಾನ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಕೈಮಗ್ಗ,ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್,ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಸಿ.ಎಂ.ನಿAಬಣ್ಣವರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಎಸ್.ವಿ.ಸಂಕನೂರ,ಪ್ರದೀಪ ಶೆಟ್ಟರ್, ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ , ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್, ಕೆಯುಐಡಿಎಫ್ಸಿ ವ್ಯವಸ್ಥಾಪಕ ನಿರ್ದೇಶಕಿ ದೀಪಾ ಚೋಳನ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉಪಸ್ಥಿತರಿದ್ದರು.
೯ಲೈವ್ ನ್ಯೂಸ್ ಹುಬ್ಬಳ್ಳಿ