ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ: ಜಗದೀಶ ಶೆಟ್ಟರ್

ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ವಿದ್ಯಮಾನ, ರಾಜ್ಯದ ಮಹತ್ವದ ವಿಷಯಗಳು ಎರಡು ದಿನ ಇಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿಣಿಯಲ್ಲಿ ಚರ್ಚೆಗೆ ಬರಲಿವೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿ‌ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಸಲಹೆ, ಸೂಚನೆ ನೀಡಲು ಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. 11 ಸ್ಥಾನಗಳಲ್ಲಿ ಗೆದ್ದರೂ ಉತ್ತಮ ಸಾಧನೆ ತೋರಿದೆ. ಸೋಲಾದ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಪರಾಮರ್ಶೆ ಮಾಡಲಾಗುವುದು ಎಂದರು.

ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಸುದ್ದಿ ಬಗ್ಗೆ ಕೇಳಲಾದ ಪ್ರಶ್ನೆಗೆ ಬದಲಾವಣೆ ವಿಚಾರ ಎಲ್ಲಿಂದ ಬಂದಿದೆ ಎಂದು ನನಗೆ ಗೊತ್ತಿಲ್ಲ. ಈಗಾಗಲೇ ಈ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.