ಫೆಬ್ರವರಿಯಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ - ಸಚಿವ ಎಂಟಿಬಿ ನಾಗರಾಜು

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿರುವ ಬೃಹತ್ ಕೈಗಾರಿಕೆಗಳಿಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಗಾಗಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳನ್ನು ಒಂದೆಡೆ ಸೇರಿಸಿ ಬರುವ ಫೆಬ್ರವರಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.
ವಿಧಾನ ಸೌಧದಲ್ಲಿ ಇಂದು ಕೈಗಾರಿಕೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಂಡಿರುವ ಬೃಹತ್ ಉದ್ದಿಮೆಗಳಿಗೆ ಭಾರೀ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯ ಬೀಳಲಿದೆ.ಅದಕ್ಕಾಗಿ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ ಎಂದು ಅಭಿಪ್ರಾಯ ಪಟ್ಟರು.
ಈ ಹಿನ್ನೆಲೆಯಲ್ಲಿ ಫೆಬ್ರವರಿ ನಾಲ್ಕನೇ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಸಣ್ಣ ಉದ್ದಿಮೆದಾರರನ್ನು ಒಂದೆಡೆ ಸೇರಿಸಿ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.
ತಾತ್ಕಾಲಿಕವಾಗಿ ಫೆಬ್ರವರಿ 22 ಮತ್ತು 23 ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು,ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಸಮಾವೇಶದಲ್ಲಿ ಟೆಕ್ನಿಕಲ್ ಸೆಷನ್,ಬಿ2ಬಿ ಸಭೆಗಳು,ವಸ್ತು ಪ್ರದರ್ಶನ,ತಜ್ಞರ ಭಾಷಣಗಳು ಇರಲಿವೆ.ಸಣ್ಣ ಕೈಗಾರಿಕೆಗಳಿಗೆ ಅಗತ್ಯವಾದ ಭೂಮಿ ಒದಗಿಸುವುದು ಸೇರಿದಂತೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು.ಸಮಾವೇಶದ ಯಶಸ್ಸಿಗಾಗಿ ದೇಶಾದ್ಯಂತ ರೋಡ್ ಷೋ ನಡೆಸಲಾಗುವುದು ಎಂದು ಸಚಿವ ಎಂಟಿಬಿ ನಾಗರಾಜು ವಿವರಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ,ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಡಿ. ರೂಪ , ಎಂಎಸ್‌ಎಂಇ ನಿರ್ದೇಶಕಿ ಶ್ರೀಮತಿ ಸತ್ಯಭಾಮ, ಕೆಎಸ್‌ಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜೆ.ಸೋಮಶೇಖರ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಾರ್ಯನಿರ್ವಹಣಾಧಿಕಾರಿ ಬಸವರಾಜು,ಕಾಸಿಯಾ ಅಧ್ಯಕ್ಷ ಕೆ.ಎನ್.ನರಸಿಂಹ ಮೂರ್ತಿ,ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಹಾಗೂ ಕೈಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.