ಬೆಳಗಾವಿ | ಎಲ್ಲ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ನಿತೇಶ್

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿ.19ರಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ವೇಳೆ ವಸತಿ, ಊಟ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
'ಅಧಿವೇಶನಕ್ಕೆ ಬರುವ ಸಚಿವರು, ಶಾಸಕರು, ಗಣ್ಯರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು. ಕಳೆದ ಬಾರಿಯಂತೆ ಉತ್ತಮ ವ್ಯವಸ್ಥೆ ಮಾಡಿಕೊಳ್ಳಬೇಕು. ಇನ್ನೂ ಸಾಕಷ್ಟು ಸಮಯ ಇರುವುದರಿಂದ ಊಟ, ವಸತಿ, ಕುಡಿಯುವ ನೀರು, ಸಾರಿಗೆ, ತುರ್ತು ಆರೋಗ್ಯ ಸೌಲಭ್ಯ ಒದಗಿಸಲು ಸಿದ್ಧತೆ ಮಾಡಿಕೊಳ್ಳಬೇಕು' ಎಂದು ಹೇಳಿದರು. ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೂ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಸುಗಮ ಸಂಚಾರಕ್ಕೆ ಕ್ರಮ: ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, 'ಅಧಿವೇಶನದಲ್ಲಿ ಗಣ್ಯರ ಭದ್ರತೆ, ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗುವುದು' ಎಂದು ತಿಳಿಸಿದರು.
'ನಗರದಲ್ಲಿರುವ ಎಲ್ಲ ಬಗೆಯ ವಸತಿ ವ್ಯವಸ್ಥೆ ಪರಿಶೀಲಿಸಲಾಗಿದೆ. ಅಗತ್ಯತೆ ಅಧರಿಸಿ ಕೊಠಡಿಗಳನ್ನು ಬಳಸಲಾಗುವುದು' ಎಂದು ವಸತಿ ಸಮಿತಿ ಅಧ್ಯಕ್ಷರೂ ಆಗಿರುವ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ತಿಳಿಸಿದರು.
ಆಹಾರ ಸಮಿತಿ ಅಧ್ಯಕ್ಷೆಯಾಗಿರುವ ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಗೀತಾ ಕೌಲಗಿ, ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್, ನೆಲಮಹಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕೆ ಸೂಕ್ತ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ' ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, 'ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಸುವರ್ಣ ವಿಧಾನಸೌಧ, ಪ್ರವಾಸಿ ಮಂದಿರ, ವಿಟಿಯು, ವಸತಿಗೃಹಗಳು ಸೇರಿದಂತೆ ಎಲ್ಲೆಡೆ ನುರಿತ ವೈದ್ಯರ ತಂಡ ನಿಯೋಜಿಸಲಾಗುವುದು. ಇದಲ್ಲದೆ, ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುವುದು' ಎಂದು ವಿವರಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್, ಎಸ್ಪಿ ಡಾ.ಸಂಜೀವ್ ಪಾಟೀಲ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ, ಉಪ ಪೊಲೀಸ್ ಆಯುಕ್ತ ರವೀಂದ್ರ ಗಡಾದಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಉಪಸ್ಥಿತರಿದ್ದರು. ಆಹಾರ, ಸಾರಿಗೆ, ವಸತಿ, ಆರೋಗ್ಯ, ದೂರು ನಿರ್ವಹಣಾ ಸಮಿತಿ ಅಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.