ಬೀದರ್ (ಆ.02): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯ ಮೂರನೇ ಹಂತದಲ್ಲಿ ಮನ್ನಾಎಖೇಳ್ಳಿಯಿಂದ ಜಿಲ್ಲಾ ಮುಖ್ಯ ರಸ್ತೆ 003 ವರೆಗೆ (MDR) ಮಾರ್ಗ: ಬೋರಾಳ, ಬಸಿರಾಪೂರ, ಮತ್ತು ಉಡಬಾಳ - ಹಳ್ಳಿಖೇಡ ಜಿಲ್ಲಾ ಮುಖ್ಯ ರಸ್ತೆಯಿಂದ ನಿರ್ಣಾ ಜಿಲ್ಲಾ ಮುಖ್ಯ ರಸ್ತೆಯವರೆಗೆ (MDR) ಮಾರ್ಗ: ನಾಗೇನಕೇರಾ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.
ಕ್ಷೇತ್ರ ವ್ಯಾಪ್ತಿಯ ಬೋರಾಳ ಮತ್ತು ನಾಗೇನಕೇರಾ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು, ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ನೀಡಿರುವ ಸಮಯದಲ್ಲಿ ಉತ್ತಮ ಗುಣಮಟ್ಟದ ಕೆಲಸ ಮಾಡಬೇಕು. ನೀಡಿರುವ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಅವಶ್ಯಕವಾಗಿದ್ದು, ಹೆಚ್ಚು ಕಾಲ ಬಾಳಿಕೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕೆಂದು ಸಂಬಂಧಿಸಿದ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.