224 ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳ ನೇಮಕ
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ
ಇದೀಗ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ.
ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿರುವ ಕೇಂದ್ರ ಚುನಾವಣಾ ಆಯೋಗವು,
ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ತಹಶೀಲ್ದಾರ್ಗಳು ಸೇರಿದಂತೆ ಇತರೆ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ.
ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು,
ಅವರಿಗೆ ಪೂರಕವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.
ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಶೀಘ್ರದಲ್ಲಿಯೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ತರಬೇತಿಯನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.