ಬೊಮ್ಮಾಯಿ ಸಾಧನೆಗೆ ಮೆಚ್ಚುಗೆ ಸೂಚಿಸಿದ ಅರುಣ್ ಸಿಂಗ್!

ಬೆಂಗಳೂರು, ಸೆಪ್ಟೆಂಬರ್ 07; ಕರ್ನಾಟಕದ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು.
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆಳ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಬೆಳಗಾವಿಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಐತಿಹಾಸಿಕ ಸಾಧನೆ ಮಾಡಿದೆ. ಮುಖ್ಯಮಂತ್ರಿಗಳ ಬದಲಾವಣೆ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದು ಹೈಕಮಾಂಡ್ ನಾಯಕರು ಸಹ ನಿಟ್ಟುಸಿರು ಬಿಟ್ಟಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಆದರೆ ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಫಲಿತಾಂಶ ಬಂದಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ನಡೆದ ಮೊದಲ ಚುನಾವಣೆ ಬಗ್ಗೆ ಹೈಕಮಾಂಡ್ ನಾಯಕರಿಗೂ ಕುತೂಹಲವಿತ್ತು. ಪಕ್ಷದ ಸಾಧನೆಗೆ ವರಿಷ್ಠರು ಸಮಾಧಾನಗೊಂಡಿದ್ದು, ರಾಜ್ಯದ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಎಲ್ಲರೂ ಅಭಿನಂದಿಸುತ್ತಿದ್ದಾರೆ.
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕನ್ನಡದಲ್ಲಿ ಅವರು ಟ್ವೀಟ್ ಮಾಡಿದ್ದು, 'ಇನ್ನು ಮುಂದೆಯೂ ಅನೇಕ ಇಂತಹ ಸಾಧನೆಗಳಿಗೆ ಶ್ರೀ ಬೊಮ್ಮಾಯಿ ಅವರು ಸಾಕ್ಷಿಯಾಗಲಿದ್ದಾರೆ' ಎಂದು ಬಣ್ಣಿಸಿದ್ದಾರೆ.
ಅರುಣ್ ಸಿಂಗ್ ಟ್ವೀಟ್
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟ್ವೀಟ್ ಮಾಡಿದ್ದು, ;ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮೊದಲ ಬಾರಿಗೆ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿರುವ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಇನ್ನು ಮುಂದೆಯೂ ಅನೇಕ ಇಂತಹ ಸಾಧನೆಗಳಿಗೆ ಶ್ರೀ ಬೊಮ್ಮಾಯಿ ಅವರು ಸಾಕ್ಷಿಯಾಗಲಿದ್ದಾರೆ' ಎಂದು ಹೇಳಿದ್ದಾರೆ.