ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಬಿಜೆಪಿಗರು

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯ ಪರಿಶಿಷ್ಟ ಜಾತಿ ಹಾಗೂ ಸಮುದಾಯದ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಗ್ರಾಮಾಂತರ ಘಟಕದ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ದಲಿತರಿಗೆ ಆ ನಾಯಕರು ನ್ಯಾಯ ಕೊಡಿಸಲು ಸಮರ್ಥರಲ್ಲ ಎಂದೂ ಹೇಳಿದ್ದಾರೆ. ಬಿಜೆಪಿಯನ್ನು ಅವಮಾನಿಸುವ ಉದ್ದೇಶದಿಂದಲೇ ಅವರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂಬ ಅಹಂಕಾರದ ಹೇಳಿಕೆಯನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ. ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂಬ ಹೇಳಿಕೆಯನ್ನು ಕೂಡಲೇ ಸಿದ್ದರಾಮಯ್ಯನವರು ಹಿಂಪಡೆಯಬೇಕು. ಸಿದ್ದರಾಮಯ್ಯನವರ ಹೇಳಿಕೆ ಪರಿಶಿಷ್ಟ ಸಮುದಾಯದ ಬಗ್ಗೆ ದ್ವೇಷದ ಮನೋಭಾವ ಹುಟ್ಟು ಹಾಕುವಂತಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.