ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್
ಗಡಿನಾಡು ಬೀದರ ಜಿಲ್ಲೆಯ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಕುತ್ತಾಬಾದ್ ಗ್ರಾಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಸಹಯೋಗದೊಂದಿಗೆ ಐವತ್ತು ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನೆರವೇರಿಸಿದರು. ಕುತ್ತಾಬಾದ್ ಗ್ರಾಮಕ್ಕೆ ಭೇಟಿ ನೀಡಿ, ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕುತ್ತಾಬಾದ್ ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇನ್ನೂ ಬೇರೆ ಬೇರೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಇದರಿಂದ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಸಾಧ್ಯವಾದಷ್ಟು ಹೆಚ್ಚಿನ ಅನುದಾನ ನೀಡುವ ಕೆಲಸವನ್ನು ನಾನು ಮಾಡುತ್ತಾ ಬಂದಿದ್ದೇನೆ. ಗ್ರಾಮದ ಜನರು ಇದೀಗ ಅನೇಕ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಅವುಗಳನ್ನು ಪರಿಹರಿಸುವ ಕೆಲಸವನ್ನು ಆದಷ್ಟು ಶೀಘ್ರವಾಗಿ ಮಾಡುತ್ತೇನೆ. ಎಲ್ಲರೂ ಒಗಟ್ಟಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸುವ ಕೆಲಸ ಮಾಡಬೇಕು. ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿವೃದ್ಧಿ ವಿಷಯವಾಗಿ ಚರ್ಚಿಸುತ್ತೇನೆ. ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಇನ್ನೂ ಅನೇಕ ಕೆಲಸಗಳು ಆಗಬೇಕಾಗಿದ್ದು ಹಂತ ಹಂತವಾಗಿ ಎಲ್ಲಾ ಕೆಲಸಗಳನ್ನು ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.