ಧನ್ವಂತರಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಧನ್ವಂತರಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು, ಸೆ. 04: ಮೂರನೆ ಅಲೆ ಭೀತಿ ನಡುವೆ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಹಂತ ಹಂತವಾಗಿ ತೆರೆಯಲು ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ 9 ಮತ್ತು 10 ನೇ ತರಗತಿ ಪ್ರಾರಂಭವಾಗಿದೆ. ಇದೀಗ ಆರನೇ ತರಗತಿಯಿಂದ ಎಂಟನೇ ತರಗತಿವರೆಗೆ ಸೆ. 6 ರಿಂದ ತರಗತಿಗಳನ್ನು ತೆರೆಯಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಇದರ ನಡುವೆ ಚಿಕ್ಕಬಾಣಾವರದ ನರ್ಸಿಂಗ್ ಕಾಲೇಜಿನಲ್ಲಿ ಹದಿನಾರು ವಿದ್ಯಾರ್ಥಿಗಳಲ್ಲಿ ಕೊರೊನಾವೈರಸ್ ಕಾಣಿಸಿಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಕಾಲೇಜನ್ನು ಸೀಲ್ ಡೌನ್ ಮಾಡಿದ್ದಾರೆ.

ದಾಸರಹಳ್ಳಿ ವಲಯದ ಚಿಕ್ಕಬಾಣಾವರದಲ್ಲಿ ಇರುವ ನರ್ಸಿಂಗ್ ಕಾಲೇಜು ಇತ್ತೀಚೆಗೆ ಅರಂಭವಾಗಿತ್ತು. ಕೇರಳ ಮೂಲದವರೇ ಹೆಚ್ಚಿದ್ದು ಸುಮಾರು ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಯೊಬ್ಬ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಹದಿನಾರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಎಲ್ಲರಿಗೂ ಪರೀಕ್ಷೆ: ಧನ್ವಂತರಿ ಕಾಲೇಜಿನ ಕೆಲ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಮೊದಲು ಹನ್ನೊಂದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಪುನಃ ತಪಾಸಣೆ ನಡೆಸಿದಾಗ ಹೆಚ್ಚುವರಿ ಐದು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಾಲೇಜಿನ ಹಾಸ್ಟಲ್ ನಲ್ಲಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಮಾಡಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳನ್ನು ಮಂಜುನಾಥ ನಗರದಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಗಿದೆ. ಇನ್ನು ಕೊರೊನಾ ಸೋಂಕಿತ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 77 ಮಂದಿ, ಪರೋಕ್ಷವಾಗಿ ಸಂಪರ್ಕ ಹೊಂದಿದ್ದ 88 ಮಂದಿಯನ್ನು ಗುರುತು ಮಾಡಿರುವ ಆರೋಗ್ಯ ಅಧಿಕಾರಿಗಳು ಅವರಿಗೂ ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಧನ್ವಂತರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವರು ಬಹುತೆಕ ಹೊರ ರಾಜ್ಯದ ವಿದ್ಯಾರ್ಥಿಗಳು. ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದುಕೊಂಡ ಬಳಿಕ ಕಾಲೇಜುಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಕೊರೊನಾ ಸೋಂಕಿತರಲ್ಲಿ ಎಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿಲ್ಲ ಎಂಬುದರ ಬಗ್ಗೆ ವರದಿ ನೀಡಲು ಕಾಲೇಜು ಅಡಳಿತ ಮಂಡಳಿಗೆ ಸೂಚಿಸಿದ್ದೇವೆ. ಎಲ್ಲಾ ವಿವರಗಳನ್ನು ಪರಿಶೀಲಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಾಲೇಜುಗಳು ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಗಿದೆ. ಉಲ್ಲಂಘನೆ ಮಾಡುವ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ದಾಸರಹಳ್ಳಿ ವಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.