ಕುತೂಹಲ ಮೂಡಿಸಿದೆ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಿಎಸ್ವೈ ನಡೆ..!

ಬೆಂಗಳೂರು,ಅ.2- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿರುವ ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಡೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಏಕೆಂದರೆ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬಿಜೆಪಿ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ಈ ಎರಡೂ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರಾ ಎಂಬ ಯಕ್ಷ ಪ್ರಶ್ನೆ ಪ್ರಮುಖವಾಗಿ ಕಾಡುತ್ತಿದೆ.
ಕೇವಲ ಬಿಜೆಪಿ ಮಾತ್ರವಲ್ಲದೆ ಯಡಿಯೂರಪ್ಪನವರ ನಡೆಯನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ತೀವ್ರ ಆಸಕ್ತಿಯಿಂದ ನೋಡುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಯಡಿಯೂರಪ್ಪ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಷ್ಟೊಂದು ತೊಡಗಿಕೊಂಡಿಲ್ಲ.
ತಮ್ಮ ತವರು ಜಿಲ್ಲೆ ಶಿವಮೊಗ್ಗದ ತಮ್ಮ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದನ್ನು ಬಿಟ್ಟರೆ ಕಾವೇರಿಯಲ್ಲಿ ಕುಳಿತು ಎಲ್ಲವನ್ನು ವೀಕ್ಷಿಸುತ್ತಿದ್ದಾರೆ. ಹಾನಗಲ್ ಮತ್ತು ಸಿಂಧಗಿಯಲ್ಲಿ ಬಿಜೆಪಿ ಗೆಲ್ಲಬೇಕಾದರೆ ಪ್ರಮುಖವಾಗಿರುವ ಲಿಂಗಾಯಿತ ಮತಗಳು ಸೆಳೆಯಲೇಬೇಕು. ಈ ಸಮುದಾಯದ ಮೇಲೆ ಅತ್ಯಂತ ಪ್ರಭಾವ ಹೊಂದಿರುವ ಬಿಎಸ್ವೈ ಪ್ರಚಾರಕ್ಕೆ ಬಂದರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿದೆ.
70 ವರ್ಷದ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರು ಉಪಚುನಾವಣೆ ಅಭ್ಯರ್ಥಿ ಪರ ಪ್ರಚಾರ ನಡೆಸಿದರೇ ಲಿಂಗಾಯತ ಸಮುದಾಯದ ಮತದಾರರೇ ಅಕವಾಗಿರುವ ಎರಡು ಕ್ಷೇತ್ರಗಳಲ್ಲಿ ಗೆಲುವು ಖಚಿತ ಎಂದು ಹಲವರು ನಂಬಿದ್ದಾರೆ.
ಇನ್ನೂ ಟಿಕೆಟ್ ಆಕಾಂಕ್ಷಿಗಳು ಕೂಡ ಯಡಿಯೂರಪ್ಪನವರ ಮನೆ ಬಾಗಿಲು ತಟ್ಟುತ್ತಿದ್ದು, ಪ್ರಚಾರಕ್ಕೆ ಬರುವಂತೆ ಮನವಿ ಮಾಡುತ್ತಿದ್ದಾರೆ. ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ.
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ನಾಯಕರು ಯೋಜನೆ ರೂಪಿಸಿದ್ದಾರೆ, ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 18 ತಿಂಗಳು ಮಾತ್ರ ಬಾಕಿ ಉಳಿದಿದ್ದು, ಉಪಚುನಾವಣೆಯಲ್ಲಿ ಸೋತರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕದಲ್ಲಿದೆ ಬಿಜೆಪಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿರುವ ಹಾನಗಲ್ ವಿಧಾನ ಸಭಾ ಕ್ಷೇತ್ರ ಗೆಲ್ಲುವುದು ಅನಿವಾರ್ಯ, ಇದು ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ, ಅಭ್ಯರ್ಥಿ ಘೋಷಣೆಯಾದ ನಂತರ ಸಂಪುಟ ಸಹೋದ್ಯೋಗಿಗಳು ಪ್ರಚಾರ ಕೈಗೊಳ್ಳಲಿದ್ದಾರೆ.
ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಕಣಕ್ಕಿಳಿಯುವ ಸಾಧ್ಯತೆಯಿದೆ.ಇನ್ನೂ ಹಾನಗರ್ ಕ್ಷೇತ್ರಕ್ಕೆ ಗದಗ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಉದಾಸಿ ಅವರನ್ನು ಕಣಕ್ಕಿಳಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಒಂದು ವೇಳೆ ಯಡಿಯೂರಪ್ಪ ಅವರು ಉಪಚುನಾವಣೆ ಪ್ರಚಾರಕ್ಕೆ ಬಾರದಿದ್ದರೇ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಮತ್ತು ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗುತ್ತದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದಿರಬಹುದು, ಆದರೆ ಅವರು ಪಕ್ಷಕ್ಕೆ ಅನಿವಾರ್ಯ, ಕೇವಲ 10 ನಿಮಿಷಗಳ ಭಾಷಣ ಮಾಡಿದರೂ ಪಕ್ಷಕ್ಕೆ ಸಹಾಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.ಸಿಂದಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ರಮೇಶ್ ಭೂಸನೂರು ತಮ್ಮ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಅವರಿಗೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ, ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಮುಖ್ಯಸ್ಥ ನಳೀನ್ಕುಮಾರ್ ಕಟೀಲ್ ಅವರ ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.