ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಮನವಿ | Kolar |
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಿ. ಕೃಷ್ಣಪ್ಪ ಬಣವು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು. ಪಿಟಿಸಿಎಲ್ ಕಾಯ್ದೆ ವಿರುದ್ಧ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಸುಗ್ರೀವಾಜ್ಞೆ ತಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು. ಆದೇ ರೀತಿ ಸದಾಶಿವ ಆಯೋಗ ವರದಿಯನ್ನು ಒಳಮೀಸಲಾತಿ ವರ್ಗೀಕರಣಕ್ಕಾಗಿ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಈ ಹಿಂದಿನ ನ್ಯಾಯವಾದಿ ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕರಿಸಿ ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ರಾಜ್ಯ ಸರ್ಕಾರ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ದಲಿತ ಸಂಘರ್ಷ ಸಮಿತಿ ವಿಧಾನಸೌಧ ಪ್ರವೇಶಿಸುತ್ತದೆ ಎಂದು ಎಚ್ಚರಿಕೆ ನೀಡಿದರು.