ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರಿಂದ ಚಾಲನೆ
ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ನೀಡಲು ಕ್ರಮ ವಹಿಸಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ ನಗರದ ಡಾ. ಡಿ.ಎಸ್.ಕರ್ಕಿ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಮಾತಾಡ್ ಮಾತಾಡ್ ಕನ್ನಡ, ಲಕ್ಷ ಕಂಠಗಳಿಂದ ಕನ್ನಡದ ಶ್ರೇಷ್ಠತೆ ಸಾರುವ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕನ್ನಡ ವಿಶ್ವದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ. ಇದಕ್ಕೆ ಭವ್ಯವಾದ ಇತಿಹಾಸ ಕೂಡ ಇದೆ. ಕನ್ನಡ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಕನ್ನಡ ಬಳಕೆಯನ್ನು ಮಾಡಬೇಕು ಎಂದು ಸಿ. ಎಂ. ಬೊಮ್ಮಾಯಿ ಅವರು ಕರೆ ನೀಡಿದರು. ಕನ್ನಡ ಭಾಷೆ ಸೂರ್ಯ ಚಂದ್ರ ಇರುವವರೆಗೂ ಅಜರಾಮರವಾಗಿ ಇರುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚಿನ ಮಹತ್ವ ಕೊಟ್ಟು ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಹಂತದಲ್ಲಷ್ಟೇ ಅಲ್ಲದೆ ಪದವಿ ಕಲಿಕೆಯಲ್ಲಿ ಕನ್ನಡ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇಂಜಿನಿಯರಿಂಗ್ ಪದವಿಯನ್ನೂ ಸಹ ಕನ್ನಡದಲ್ಲಿಯೇ ಕಲಿಯುವಂತೆ ಆಗಲಿದೆ. ಈಗಾಗಲೇ 15 ಇಂಜಿನಿಯರಿಂಗ್ ಕಾಲೇಜುಗಳು ಕನ್ನಡದಲ್ಲಿ ಕಲಿಸಲು ಮುಂದೆ ಬಂದಿವೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತದೆ.ನಾವು ಕನ್ನಡಿಗರು ಎಂಬುದು ನಮ್ಮ ಹೆಮ್ಮೆಯ ಗುರುತಾಗಿರಬೇಕು.ಯಾವ ಭಾಷೆ ತನ್ನ ಬೇರುಗಳನ್ನು ಗಟ್ಟಿಯಾಗಿ ಹಿಡಿದುಕೊಳ್ಳುತ್ತದೆಯೋ ಅದನ್ನು ಕಡೆಗಣಿಸಲು ಯಾರಿಂದಲೂ ಸಾಧ್ಯವಿಲ್ಲ. ಭಾಷೆ ಬೆಳೆಯಬೇಕಾದರೆ ಅದರ ಬಳಕೆ ಮುಖ್ಯ .ದೇಶದ ಹಲವು ಭಾಷೆಗಳಲ್ಲಿ ನಮ್ಮ ಕನ್ನಡ ಭಾಷೆ ಉತ್ತುಂಗಕ್ಕೆ ಏರುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿ. ಎಂ ಬೊಮ್ಮಾಯಿ ತಿಳಿಸಿದ್ದಾರೆ.ಮಾತಾಡ್ ಮಾತಾಡ್ ಕನ್ನಡ ಎಂಬ ಒಂದು ವಾರದ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು. ಹೊರ ರಾಜ್ಯದಿಂದ ಬರುವ ಜನರಿಗೆ ಅತ್ಯಂತ ಪ್ರೀತಿಪೂರ್ವಕವಾಗಿ ನಮ್ಮ ಭಾಷೆಯನ್ನು ಕಲಿಸಿಕೊಡುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಕುವೆಂಪು ಬಾರಿಸು ಕನ್ನಡ ಡಿಂಡಿಮವಾ, ಡಾ.ಕೆ.ಎಸ್.ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತಗಳನ್ನು ಸಾಮೂಹಿಕವಾಗಿ ಹಾಡಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕನ್ನಡ ನಾಡು, ನುಡಿ,ಸಂಸ್ಕೃತಿ,ಪರಂಪರೆಯ ಉಳಿವು ಬೆಳವಣಿಗೆಯ ಸಂಕಲ್ಪ ಬೋಧಿಸಿದರು.ಸುರಪುರ ಶಾಸಕ ರಾಜುಗೌಡ(ನರಸಿಂಹ ನಾಯಕ), ಮಾಜಿ ಸಂಸದ ಪ್ರೊ. ಐ.ಜಿ ಸನದಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಹೆಚ್ಚುವರಿ ಆಯುಕ್ತ ಅಜೀಜ್ ದೇಸಾಯಿ, ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್. ಸಿ. ಬೇವೂರ, ಹಿರಿಯ ಸಹಾಯಕ ಆಯುಕ್ತರು ಸೇರಿದಂತೆ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಕನ್ನಡ ಅಭಿಮಾನಿಗಳು ಹಾಗೂ ಶಾಲಾ,ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.