'SSLC' ಪರೀಕ್ಷೆಗೆ ಜಿಲ್ಲಾಡಳಿತ ಸಿದ್ದ, 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಕಲಬುರಗಿ ಜಿಲ್ಲಾಧಿಕಾರಿ
ಕಲಬುರಗಿ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಇದೇ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 46,029 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಮಾರ್ಚ್-ಏಪ್ರಿಲ್ 2023ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 168 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಖಾಸಗಿ ಅಭ್ಯರ್ಥಿಗಳಿಗಾಗಿ ಜಿಲ್ಲಾ ಕೇಂದ್ರದಲ್ಲಿ 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 24,022 ಬಾಲಕರು ಹಾಗೂ 22007 ಬಾಲಕಿಯರು ಸೇರಿದಂತೆ ಒಟ್ಟು 46,029 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಕಲು ತಡೆಗಟ್ಟಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಆಸನದ ವ್ಯವಸ್ಥೆಯನ್ನು ಪರೀಕ್ಷಾ ನಿಯಮಾನುಸಾರ ಮಾಡಬೇಕು. ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಕ್ಕಳಿಗೆ ಪರೀಕ್ಷೆ ಬರೆಯಲು ಅಡೆ-ತಡೆಯಾಗದಂತೆ ಮುನ್ನಚ್ಚರಿಕೆಯಾಗಿ ಸರಿಯಾದ ಫ್ಯಾನ್ ಮತ್ತು ಆಸನ ವ್ಯವಸ್ಥೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ತರುವಂತಿಲ್ಲ. ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 144 ಸೆಕ್ಷನ್ ಜಾರಿಯಾಗಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೆಕ್ರೆಪ್ಪಗೌಡ ಜಿ. ಬಿರಾದಾರ, ಶಿಷ್ಟಾಚಾರ ತಹಸೀಲ್ದಾರ ಸೈಯದ್ ನಿಸಾರ ಅಹ್ಮದ್, ಕಮಲಾಪುರ ಡಯಟ್ ಪ್ರಾಚಾರ್ಯರಾದ ಬಸವರಾಜ ಮಾಯಾಚಾರ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಎಲ್ಲಾ ಕ್ಷೇತ್ರ್ರ ಶಿಕ್ಷಾಣಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.