ಇನ್ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಸಚಿವ ಡಾ ಸುಧಾಕರ

ಇನ್ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಸಚಿವ ಡಾ ಸುಧಾಕರ

ಇನ್ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಸಚಿವ ಡಾ ಸುಧಾಕರ

ಬೆಂಗಳೂರು: ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ಆರೋಗ್ಯಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆಗಸ್ಟ್ ತಿಂಗಳಲ್ಲೇ 1.10 ಕೋಟಿ ಲಸಿಕೆ ಕೇಂದ್ರ ಸರ್ಕಾರದಿಂದ ಬಂದಿದೆ. ಮುಖ್ಯಮಂತ್ರಿಗಳು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು ಎಂದರು.
ಇಡೀ ರಾಜ್ಯದಲ್ಲಿ 4 ಕೋಟಿ ಲಸಿಕೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೊಳೆಗೇರಿ ನಿವಾಸಿಗಳಿಗೆ ಅವರು ವಾಸ ಮಾಡುವ ಸ್ಥಳದಲ್ಲೇ ಸಿಬ್ಬಂದಿ ನಿಯೋಜಿಸಿ ಅಲ್ಲೇ ಲಸಿಕೆ ನೀಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಆದ್ಯತೆ ನೀಡಿ ಲಸಿಕೆ ನೀಡಲಾಗುವುದು. ಡಿಸೆಂಬರ್ ಅಂತ್ಯಕ್ಕೆ ಎರಡೂ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.
ಎಲ್ಲ ಹಬ್ಬಗಳ ಆಚರಣೆಗೆ ಒಂದೇ ಕೋವಿಡ್ ಮಾರ್ಗಸೂಚಿ ನೀಡಲಾಗಿದೆ. ಸರ್ಕಾರಕ್ಕೆ ಯಾವುದೇ ಚಟುವಟಿಕೆ ನಿರ್ಬಂಧಿಸುವುದರಲ್ಲಿ ಸಂತೋಷವಿಲ್ಲ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೋವಿಡ್ ಮಾರ್ಗಸೂಚಿಗೆ ಎಲ್ಲರೂ ಬೆಲೆ ಕೊಡಬೇಕು ಎಂದು ತಿಳಿಸಿದರು