ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯದಾದ್ಯಂತ ಪ್ರವಾಸ: ಎಚ್.ಡಿ.ದೇವೇಗೌಡ
ಬೆಂಗಳೂರು: ಕೃಷ್ಣಾ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳನ್ನು ಕರ್ನಾಟಕದ ಹಿತಕ್ಕೆ ತಕ್ಕಂತೆ ರೂಪಿಸಲು ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪಾದಯಾತ್ರೆ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
'ನದಿ ನೀರು ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ ಈ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ. ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯದಾದ್ಯಂತ ಪಾದಯಾತ್ರೆ ನಡೆಯಲಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
'ತಮಿಳುನಾಡು ಮಾತು ಕೇಳಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ಈ ವಿಷಯದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ನನಗೆ ಬೇಸರ ಇದೆ' ಎಂದೂ ಅವರು ಹೇಳಿದರು.
'ಕೃಷ್ಣಾ ಮೇಲ್ದಂಡೆ ಯೋಜನೆಗೆ ಹಣದ ನಿಗದಿ ಪ್ರಮಾಣ ಇಳಿಕೆಯಾಗಿದೆ. ಈ ನದಿ ನೀರು ಯೋಜನೆಗಾಗಿ ಅವರ ಪಕ್ಷದ ನಾಯಕರೊಂದಿಗೆ ಮಾತನಾಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಸಮಸ್ಯೆ ಬಗೆಹರಿಸುವುದಾಗಿಯೂ ಹೇಳಿದ್ದಾರೆ. ಸಮಸ್ಯೆ ಪರಿಹಾರವಾದರೆ ಒಳ್ಳೆಯದು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ' ಎಂದರು.
'ಪಾದಯಾತ್ರೆ ಮುಗಿದ ಬಳಿಕ ಪ್ರಧಾನಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಿ ಮನವಿ ಪತ್ರ ನೀಡುತ್ತೇವೆ. ಒಂದು ವೇಳೆ ರಾಜ್ಯ ಸರ್ಕಾರವೇ ಪ್ರಧಾನಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ಅವರ ಜೊತೆಗೆ ನಮ್ಮ ಪಕ್ಷ ಹೋಗಲೂ ಸಿದ್ಧವಿದೆ' ಎಂದರು.