ಆದಾಯ ಮೀರಿ ಆಸ್ತಿ ಗಳಿಕೆ ಆರೋಪ; ಸಚಿವ ವಿ. ಸೋಮಣ್ಣ ವಿರುದ್ಧ ತನಿಖೆ ನಡೆಸಲು ಕೋರ್ಟ್ ಸೂಚನೆ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ವಿಚಾರವಾಗಿ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.ಸಚಿವ ಸೋಮಣ್ಣ ವಿರುದ್ಧದ ಆರೋಪ ಸಂಬಂಧ ಹೈಕೋರ್ಟ್ ನಿರ್ದೇಶನದ ಮೇರೆ ಮರು ವಿಚಾರಣೆ ಪ್ರಾರಂಭಿಸಿರುವ ವಿಶೇಷ ನ್ಯಾಯಾಲಯ, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಎರಡು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ನಗರದ ರಾಮಕೃಷ್ಣ ಎಂಬುವವರು 2012ರಲ್ಲಿ ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪದಲ್ಲಿ ಹುರಳಿಲ್ಲ ಎಂದು ತಿಳಿಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.