ಕೆಆರ್‌ಎಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಕೊಪ್ಪಳ: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಹತ್ತು ಜನ ಕಾರ್ಯಕರ್ತರು ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶುಕ್ರವಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಳಿಕ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ.
ಕೆಆರ್‌ಎಸ್ ಪದಾಧಿಕಾರಿಯೊಬ್ಬರ ಸಂಬಂಧಿಕರ ಹೆರಿಗೆ ಜಿಲ್ಲಾಸ್ಪತ್ರೆಯಲ್ಲಿ ಆಗಿದ್ದು, ಮಾತ್ರೆ ತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತ ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿಯಾಗಿದೆ ಎಂದು ತಿಳಿದುಬಂದಿದೆ.
ಬಳಿಕ ಕೆಲ ಕಾರ್ಯಕರ್ತರು ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು; ವಿಕೋಪಕ್ಕೆ ಹೋಯಿತು. ಸ್ಥಳಕ್ಕೆ ಬಂದ ಪೊಲೀಸರು ವಾತಾವರಣ ತಿಳಿಗೊಳಿಸಿದರು. ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ.
'ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹತ್ತು ಜನರನ್ನು ಬಂಧಿಸಲಾಗಿದ್ದು, ಎಫ್‌ಐಆರ್ ದಾಖಲಾಗಿದೆ' ಎಂದು ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣರೆಡ್ಡಿ'ಕೊಪ್ಪಳ ಜಿಲ್ಲಾಸ್ಪತ್ರೆ ಅವ್ಯವಸ್ಥೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅವುಗಳನ್ನು ಸರಿಪಡಿಸುವಂತೆ ತಿಳಿಸಲು ಇಂದು ಅಲ್ಲಿಗೆ ಹೋಗಿದ್ದ ಪಕ್ಷದವರ ಮೇಲೆ ಸುಳ್ಳು ಆರೋಪಗಳ ದೂರು ಹೊರಿಸಿ ದೂರು ದಾಖಲಿಸಲಾಗಿದೆ' ಎಂದು ಆರೋಪಿಸಿದ್ದಾರೆ.