ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ ಕಾರಣವಾಗಿದೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ೧೫ ದಿನಗಳಲ್ಲಿ ಎದುರಾಗಿರುವ ಪಕ್ಷದೊಳಗಿನ ಅಸಮಾಧಾನ ದೂರ ಮಾಡಲು ಅನುಕೂಲವಾಗುವಂತೆ ಪಕ್ಷದ ಹೈಕಮಾಂಡ್ ನೆರವು ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ವಿಷಯದ ಕುರಿತು ಚರ್ಚೆ ನಡೆಸಲು ಮುಂದಿನ ವಾರ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆಯಲ್ಲಿ ಹಲವು ಸಚಿವರ ಅತೃಪ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಹೈಕಮಾಂಡ್ ಗಮನಕ್ಕೆ ತಂದು ಅಲ್ಲಿಂದಲೇ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ.
ತಮಗೆ ಬೇಕಾದ ಖಾತೆ ಸಿಗಲಿಲ್ಲ ಎಂದು ಸಚಿವರಾದ ಎಂಟಿಬಿ ನಾಗರಾಜ್ ಮತ್ತು ಅರಣ್ಯ ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ಆನಂದ್ ಸಿಂಗ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.