ಗೋವಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಗೋವಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ.

ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಗುರುವಾರ ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ 34 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಹೆಸರು ಪಟ್ಟಿಯಲ್ಲಿ ಇಲ್ಲ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಂಖಳಿಂ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಉಪ ಮುಖ್ಯಮಂತ್ರಿ ಮನೋಹರ್ ಅಜ್‌ಗಾವೋಂಕರ್‌ ಮರ್ಗಾನ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪಣಜಿ ಕ್ಷೇತ್ರದಲ್ಲಿ ಬಿಜೆಪಿ ಕ್ಷೇತ್ರದ ಹಾಲಿ ಶಾಸಕ ಅಟನಸಿಯೋ ಮೊನ್ನೆರ್ರೇಟ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ನೀಡದ ಕುರಿತು ಮಾತನಾಡಿದ ದೇವೇಂದ್ರ ಫಡ್ನವೀಸ್, "ಮನೋಹರ್ ಪರಿಕ್ಕರ್ ಪುತ್ರನಿಗೆ ಬೇರೆ ಕ್ಷೇತ್ರದ ಆಯ್ಕೆ ನೀಡಿದೆವು. ಆದರೆ ಅವರು ತಿರಸ್ಕರಿಸಿದರು. ಅವರ ಜೊತೆ ಮಾತುಕತೆ ನಡೆಯುತ್ತಿದೆ. ಅವರು ಒಪ್ಪಿಕೊಳ್ಳುತ್ತಾರೆ ಎಂದು ನಾವು ಭಾವಿಸಿದ್ದೇವೆ" ಎಂದರು.

ಇದೇ ಮೊದಲ ಬಾರಿಗೆ ಬಿಜೆಪಿ ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುತ್ತಿದೆ. "ಪಕ್ಷ 22 + ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ" ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿವೆ. ಆದರೆ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂದು ಸಮೀಕ್ಷೆ ವರದಿಯಲ್ಲಿ ಅಂದಾಜಿಸಿವೆ.

ಕಾಂಗ್ರೆಸ್, ಬಿಜೆಪಿ, ಶಿವಸೇನೆ, ಎನ್‌ಸಿಪಿ, ಗೋವಾದ ಪ್ರಾದೇಶಿಕ ಪಕ್ಷಗಳ ಜೊತೆಗೆ ಈ ಬಾರಿಯ ಚುನಾವಣೆಗೆ ಎಎಪಿ ಮತ್ತು ಟಿಎಂಸಿ ಪಕ್ಷಗಳು ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ.