ತಜ್ಞರ ಜತೆ ಸಭೆ ನಡೆಸಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ : ಸಿಎಂ

ತಜ್ಞರ ಜತೆ ಸಭೆ ನಡೆಸಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ : ಸಿಎಂ

ಹುಬ್ಬಳ್ಳಿ,ಡಿ.7- ರಾಜ್ಯದ ನಾನಾ ಕಡೆ ದಕ್ಷಿಣ ಆಫ್ರಿಕಾ ಮೂಲದ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಇಬ್ಬರಿಗೆ ಮಾತ್ರ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿತ್ತು.
ಅವರ ಸಂಪರ್ಕದಲ್ಲಿದ್ದವರಿಗೆ ಯಾವುದೇ ರೀತಿಯ ಸೋಂಕು ಕಾಣಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಓಮಿಕ್ರಾನ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಜಿನೋಮಿಕ್ ಸ್ವಿಕ್ವೆನ್ಸ್ ಪ್ರಯೋಗಾಲಯಗಳನ್ನು ಹೆಚ್ಚಿಸುವ ಬಗ್ಗೆ ತಜ್ಞರ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.

ವಿದೇಶದಿಂದ ರಾಜ್ಯಕ್ಕೆ ಬಂದವರನ್ನು ಕಡ್ಡಾಯವಾಗಿ ವಿಮಾನ ನಿಲ್ದಾಣ ಮತ್ತಿತರ ಕಡೆ ಜಿನೋಮಿಕ್ ಸೀಕ್ವೆನ್ಸ್ಗೆ ಒಳಪಡಿಸುತ್ತಿದ್ದೇವೆ. ತಜ್ಞರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ಅದನ್ನು ಸರ್ಕಾರ ಅನುಷ್ಠಾನ ಮಾಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆ ಕುರಿತಂತೆ ಮಾತನಾಡಿದ ಬೊಮ್ಮಾಯಿ ಅವರು ನಾವು 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ನಮಗೆ ಮತದಾರರಿಂದ ಉತ್ತಮವಾದ ಪ್ರತಿಕ್ರಿಯೆ ಕಂಡುಬರುತ್ತಿದೆ. ನಿರೀಕ್ಷೆಗೂ ಮೀರಿದ ಗೆಲವನ್ನು ಬಿಜೆಪಿ ಕಾಣಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ನಮಗೆ ಈ ಬಾರಿ ಪರಿಷತ್ನಲ್ಲಿ ಬಹುಮತಕ್ಕೆ ಅಗತ್ಯವಿರುವಷ್ಟು ಸಂಖ್ಯೆಗಳನ್ನು ಗೆದ್ದೇ ಗೆಲ್ಲುತ್ತೇವೆ. ಎಲ್ಲ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಇಂದು ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ಕರೆಯಲಾಗಿದೆ.

ಸಚಿವರು, ಶಾಸಕರು, ಸಂಸದರು, ಮುಖಂಡರು ಮತ್ತಿತರರು ಭಾಗವಹಿಸಲಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯಾದ ಮಹಾಂತೇಶ ಕವಟಗಿಮಠ ಗೆಲುವುದು ನೂರಕ್ಕೆ 100ರಷ್ಟು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಖನ್ ಜಾರಕಿಹೊಳಿ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ. ಇದಕ್ಕೂ ನಮಗೇನೂ ಸಂಬಂಧವಿಲ್ಲ . ನಾವು ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಏನೆಲ್ಲಾ ಕಾರ್ಯತಂತ್ರ ರೂಪಿಸಬೇಕೋ ರೂಪಿಸುತ್ತೇವೆ. ಇಡೀ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ಗೆಲುವಿನ ಬಗ್ಗೆ ಯಾವುದೇ ಸಂಶಯವಿಲ್ಲ ಎಂದರು.

ಮುಖ್ಯಮಂತ್ರಿ ಬೊಮ್ಮಾಯಿವರು ಸುಳ್ಳು ಹೇಳುತ್ತಿದ್ದಾರೆ ಎಂದಿರುವ ಸಿದ್ದರಾಮಯ್ಯ ನವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಸಿದ್ದರಾಮಯ್ಯನವರ ಬಗ್ಗೆ ನನಗೆ ಬಹಳ ಗೌರವವಿತ್ತು. ಆದರೆ ಅವರ ಇತ್ತೀಚಿನ ಹೇಳಿಕೆಗಳು ಬೇಸರ ತಂದಿದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ರೇಣುಕಾ ಚಾರ್ಯ ಹೇಳಿಕೆಗೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಎಲ್ಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆÉ ಟಾಂಗ್ ನೀಡಿದರು.