ನಾಳೆ ರಾಜ್ಯಕ್ಕೆ ಜೆ.ಪಿ ನಡ್ಡಾ ಆಗಮನ : ಬಿಜೆಪಿ 'ವಿಜಯ ಸಂಕಲ್ಪ ಯಾತ್ರೆ'ಗೆ ಚಾಲನೆ

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಕರ್ನಾಟಕದಲ್ಲಿ ಚುನಾವಣಾ ರಣ ಕಹಳೆ ಮೊಳಗಿಸುತ್ತಿದ್ದಾರೆ.
ಇದೀಗ ಮತ್ತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರು ನಾಳೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ.ನಾಳೆ ಬೆಳಗ್ಗೆ 11ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ನಡ್ಡಾ ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದ ಗೌರೀಶಂಕರ ಕಲ್ಯಾಣ ಮಂಟಪ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 4.25ಕ್ಕೆ ನಡ್ಡಾ ಅವರು ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ.
ನಾಳೆಯಿಂದ ಬಿಜೆಪಿ ರಥಯಾತ್ರೆ
ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಇದೀಗ ಮಾರ್ಚ್ 1ರ ನಾಳೆಯಿಂದ ಬಿಜೆಪಿ ರಥಯಾತ್ರೆ ಆರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಹೇಳಿದರು.
ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.