ಪ್ರವಾಹ: ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

ಪ್ರವಾಹ: ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮುಂದುವರಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕೈಗೊಂಡಿರುವ‌ ಪರಿಹಾರ ಕ್ರಮಗಳ ಬಗ್ಗೆ ಮಂಗಳವಾರ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್‌ ಪ್ರವಾಹ ಪರಿಸ್ಥಿತಿ ಕುರಿತು ವಿವರಿಸಿದರು.

ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮುಖಂಡರಾದ ವೀರಕುಮಾರ ಪಾಟೀಲ, ಎ.ಬಿ. ಪಾಟೀಲ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಜರಿದ್ದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಉಂಟಾಗಿದ್ದ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೇ ಈ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈ ಬಾರಿಯೂ ಪ್ರವಾಹ ಬಂದಿದೆ. ಜನರು ಮತ್ತೆ ಸಂಕಷ್ಟಕ್ಕೆ ‌ಒಳಗಾಗಿದ್ದಾರೆ. ಈ ವೇಳೆ ಮುಖ್ಯಮಂತ್ರಿಯೇ ರಾಜೀನಾಮೆ ಕೊಟ್ಟು ಹೊರ ನಡೆದಿದ್ದಾರೆ ಎಂದು ಟೀಕಿಸಿದರು.

ನಾನೂ ಸೇರಿದಂತೆ ಪಕ್ಷದ ನಾಯಕರೆಲ್ಲರೂ, ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇವೆ. ವಾಸ್ತವ ಪರಿಸ್ಥಿತಿಯನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ತುರ್ತಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಆಗ್ರಹಿಸುತ್ತೇವೆ ಎಂದರು.

ಸರ್ಕಾರವು ಪ್ರವಾಹ ಪರಿಹಾರ ಕಾರ್ಯಕ್ಕೆ ಮೊದಲ ಆದ್ಯತೆ‌ ಕೊಡಬೇಕು. ಅನಗತ್ಯ ಖರ್ಚುಗಳನ್ನು ಕಡಿತಗೊಳಿಸಿ ಆ ಹಣವನ್ನು ಪರಿಹಾರಕ್ಕೆ ಬಳಸಬೇಕು. ಇದಕ್ಕಾಗಿ ಚರ್ಚಿಸಲು ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದರು.