ಪ್ರವಾಹ: ಹಿಮಾಚಲ ಪ್ರದೇಶಕ್ಕೆ ಅಮಿತ್ ಶಾ ನೆರವಿನ ಭರವಸೆ

ನವದೆಹಲಿ: 'ಭಾರಿ ಮಳೆಯ ಕಾರಣಕ್ಕಾಗಿ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು' ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರಿಂದ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಷಾ ಅವರು, 'ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ ತಂಡಗಳು (ಎನ್‌ಡಿಆರ್‌ಎಫ್) ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಪ್ರವಾಹ ಪೀಡಿತ ಪ್ರದೇಶಗಳನ್ನು ತಲುಪುತ್ತಿವೆ' ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
'ಪ್ರವಾಹ ಪರಿಸ್ಥಿತಿಯ ಕುರಿತು ಗೃಹ ಸಚಿವಾಲಯವು ನಿರಂತರವಾಗಿ ಗಮನಿಸುತ್ತಿದೆ. ಹಿಮಾಚಲ ಪ್ರದೇಶಕ್ಕೆ, ಕೇಂದ್ರದಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು' ಎಂದೂ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯ ಕಾರಣ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.