ಬಡ ಪೋಷಕರ ಜೇಬಿಗೆ ಸರ್ಕಾರದ ಕತ್ತರಿ: ಸಿದ್ದರಾಮಯ್ಯ

ಬಡ ಪೋಷಕರ ಜೇಬಿಗೆ ಸರ್ಕಾರದ ಕತ್ತರಿ: ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್‌ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಮಾಡಿದ ಬಿಜೆಪಿ ಸರ್ಕಾರ, ಈಗ ದೇಣಿಗೆ ನೆಪದಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಂದ ಶಾಲಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಕುರಿತು ಟ್ವಿಟರ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, 'ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ.

ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಂದ ಶಾಲಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಕುರಿತು ಟ್ವಿಟರ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, 'ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಬಿಜೆಪಿ ಸರ್ಕಾರಕ್ಕೆ ಇಂಥ ದೈನೇಸಿ ಸ್ಥಿತಿ ಬರಬಾರದಿತ್ತು' ಎಂದು ವಾಗ್ದಾಳಿ ನಡೆಸಿದ್ದಾರೆ.

'ನಾವು ವಿದ್ಯಾರ್ಥಿಗಳಿಗೆ ನೀಡಿದ್ದ ಹಾಲು, ಬಿಸಿಯೂಟ, ಸಮವಸ್ತ್ರ, ಶೂ, ವಿದ್ಯಾಸಿರಿ, ಹಾಸ್ಟೆಲ್‌ ಸೌಲಭ್ಯಗಳನ್ನು ಒಂದೊಂದಾಗಿ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಈಗ ಅವರಿಂದ ದುಡ್ಡು ಕಿತ್ತುಕೊಳ್ಳಲು ಹೊರಟಿದೆ. ವೇದಿಕೆ ಮೇಲೆ ನಿಂತು ಧಮ್‌,
ತಾಕತ್‌ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿ
ಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್‌ ತೋರಿಸಲಿ' ಎಂದು
ಸವಾಲು ಹಾಕಿದ್ದಾರೆ.

'ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ, ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿತ್ತು. ಬಿಜೆಪಿ ಸರ್ಕಾರ ಓದುವ ಮಕ್ಕಳ ಕೈಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲೆಗೆ ದೂಡುತ್ತಿದೆ' ಎಂದು ಸಿದ್ದರಾಮಯ್ಯ ದೂರಿದ್ದಾರೆ.

'ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಅನುದಾನದ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲ ಶೈಕ್ಷಣಿಕ ಕಾರ್ಯಕ್ರಮ ಗಳಿಗೆ ಪುನರ್‌ ಚಾಲನೆ ನೀಡಬೇಕು' ಎಂದು ಆಗ್ರಹಿಸಿದ್ದಾರೆ.