ಬಿಜೆಪಿ | ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ: ಕೇಂದ್ರ ಸಮಿತಿಗೆ ವರದಿ

ಬಿಜೆಪಿ | ಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ: ಕೇಂದ್ರ ಸಮಿತಿಗೆ ವರದಿ

ಹುಬ್ಬಳ್ಳಿ: 'ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಸಚಿವರು ಹಾಗೂ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿ, ಪಕ್ಷದ ಕೇಂದ್ರ ಸಮಿತಿಗೆ ವರದಿ ಸಲ್ಲಿಸಲಾಗಿದೆ' ಎಂದು ಬಿಜೆಪಿ ಶಿಸ್ತು ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬೆಳಗಾವಿ, ಉತ್ತರಕನ್ನಡ, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಪರಿಷತ್ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಕೆಲವರು ಕೆಲಸ ಮಾಡಿರುವ ದೂರುಗಳು ಬಂದಿದ್ದವು. ಆ ಬಗ್ಗೆ ವಾಸ್ತವಾಂಶಗಳನ್ನು ಪರಿಶೀಲಿಸಿ ವರದಿ ನೀಡಲಾಗಿದೆ. ಕೇಂದ್ರ ಸಮಿತಿಯವರು ಅಂತಿಮವಾಗಿ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದರು.

'ಪಕ್ಷದ ಪದಾಧಿಕಾರಿಗಳು ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಘಟಕಗಳಿಗೆ ಸೂಚಿಸಲಾಗಿದೆ' ಎಂದ ಅವರು, 'ಮುಖ್ಯಮಂತ್ರಿ ಬದಲಾವಣೆ ಕುರಿತು ಹಗುರವಾಗಿ ಹೇಳಿಕೆ ನೀಡುತ್ತಿರುವರನ್ನು ಸಹ ಸಮಿತಿ ಗಂಭೀರವಾಗಿ ಪರಿಗಣಿಸಿದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

'ವರದಿಯಲ್ಲಿ ಯಾವ ಸಚಿವರು ಹಾಗೂ ಶಾಸಕರ ಹೆಸರುಗಳಿವೆ' ಎಂಬ ಪ್ರಶ್ನೆಗೆ ಉತ್ತರಿಸಲು ಪಾಟೀಲ ನಿರಾಕರಿಸಿದರು.