ಬಿಜೆಪಿ ಸೇರಲು ಜೆಡಿಎಸ್‌ ಮುಖಂಡ ಗಿರೀಶ್‌ ನಾಶಿ ನಿರ್ಧಾರ

ಬಿಜೆಪಿ ಸೇರಲು ಜೆಡಿಎಸ್‌ ಮುಖಂಡ ಗಿರೀಶ್‌ ನಾಶಿ ನಿರ್ಧಾರ

ಬೆಂಗಳೂರು: ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ 2019ರ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಗಿರೀಶ್‌ ಕೆ. ನಾಶಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಮುಂದಿನ ವಾರ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಪಡೆಯುವ ಸಾಧ್ಯತೆ ಇದೆ.

ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಗಿರೀಶ್‌, 2019ರ ಉಪ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್‌ ಸೇರಿದ್ದರು. ಆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಎದುರು ಸೋಲು ಕಂಡಿದ್ದರು. ಈಗ ಜೆಡಿಎಸ್‌ ತೊರೆದು ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ.

ಗೋಪಾಲಯ್ಯ ಅವರೊಂದಿಗೆ ಪ್ರಾಥಮಿಕ ಹಂತದಲ್ಲಿ ಚರ್ಚೆ ನಡೆದಿತ್ತು. ನಂತರ ಬಿಜೆಪಿ ರಾಜ್ಯ ಉಸ್ತುವಾರಿಯಾಗಿರುವ ಅರುಣ್‌ ಸಿಂಗ್‌ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ತಮ್ಮನ್ನು ಪರಿಗಣಿಸುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಗಿರೀಶ್‌, '2019ರ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ವರಿಷ್ಠರಿಗೆ ತಿಳಿಸಿದ್ದೆ. ಈಗ ಬೇಷರತ್ತಾಗಿ ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಪಕ್ಷ ಯಾವುದಾದರೂ ಕ್ಷೇತ್ರದಲ್ಲಿ ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದ್ದೇನೆ' ಎಂದರು.