ಬಿಜೆಪಿಗೆ ಮರಳಿದ ಮಾಜಿ ಶಾಸಕ ತಿಪ್ಪೇಸ್ವಾಮಿ

ಬಿಜೆಪಿಗೆ ಮರಳಿದ ಮಾಜಿ ಶಾಸಕ ತಿಪ್ಪೇಸ್ವಾಮಿ

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ):ಮೊಳಕಾಲ್ಮುರು ಕ್ಷೇತ್ರದ ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಭಾನುವಾರ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಮರಳಿದರು.

2013ರಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ನಿಂದ ಶಾಸ ರಾಗಿದ್ದ ತಿಪ್ಪೇಸ್ವಾಮಿ, ಬಳಿಕ ಬಿ. ಶ್ರೀರಾಮುಲು ಅವರೊಂದಿಗೇ ಬಿಜೆಪಿ ಸೇರಿದ್ದರು. 2018ರಲ್ಲಿ ಬಿ. ಶ್ರೀರಾಮುಲು ಮೊಳಕಾಲ್ಮುರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಪರಿಣಾಮ ಮುನಿಸಿಕೊಂಡು ಪಕ್ಷ ತೊರೆದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

2019ರಲ್ಲಿ ನಡೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಟಿಕೆಟ್ ಖಚಿತವಾಗದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದರು. ಚಿತ್ರದುರ್ಗದಲ್ಲಿ ಶನಿವಾರ ರಾತ್ರಿ ನಡೆದ ಸಭೆಯಲ್ಲಿ ಬಿಜೆಪಿ ಸೇರಲು ಅಧಿಕೃತ ಒಪ್ಪಿಗೆ ನೀಡಿದ್ದರು.

ಮೊಳಕಾಲ್ಮುರು ಶಾಸಕರಾಗಿರುವ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಮತ್ತೆ ಬಿಜೆಪಿ ಸೇರ್ಪಡೆ ಆಗಿರುವ ತಿಪ್ಪೇಸ್ವಾಮಿ ಅವರಿಗೇ ಪಕ್ಷದ ಟಿಕೆಟ್‌ ಸಿಗುವ ಸಾಧ್ಯತೆ ಇದೆ.