ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿ, ಡಿಸೆಂಬರ್ 16: ರಾಜ್ಯ ಬಿಜೆಪಿ ಸರಕಾರದ 40 % ಕಮಿಷನ್ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿಯಿಂದ ಬೆಳಗಾವಿಯ ಸುವರ್ಣ ಸೌಧದ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.

ಟ್ರ್ಯಾಕ್ಟರ್, ಆಟೋ ಮತ್ತು ಎತ್ತಿನ ಬಂಡಿಗಳಲ್ಲಿ ಬಂದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕತರು ಸುವರ್ಣ ಸೌಧದೊಳಗೆ ನುಗ್ಗಲು ಮುಂದಾದಾಗ ಪೊಲೀಸರು ಗೇಟ್‌ ಬಳಿಯೇ ತಡೆಹಿಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಬ್ಯಾರಿಕೇಡ್ ದಾಟಿ ಒಳನುಗ್ಗಲು ಪ್ರಯತ್ನಿಸಿದಾಗ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೆಪಿಸಿಸ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಬೆಳಗಾವಿ ಗ್ರಾಮೀಣ ಜಿಲ್ಲೆ‌ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.