ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ರಾಮನಗರ :- ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿ ಮುರ್ಮು ಅವರು ಈ ಹೆದ್ದಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದರು.
ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ವೈಮಾನಿಕ ಸಮೀಕ್ಷೆ ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ಬಹಳ ಸುಂದರವಾಗಿ ನಿರ್ಮಾಣವಾಗಿದೆ. ಎರಡೂ ನಗರಗಳ ಮಧ್ಯೆ ಪ್ರಯಾಣದ ಅವಧಿಯನ್ನು 1.20 ಗಂಟೆಗೆ ಇಳಿಕೆಯಾಗಲಿದೆ. ಜತೆಗೆ, ಈ ಬಿಜಿಯೆಸ್ಟ್ ಹೆದ್ದಾರಿಯಾಗಿರುವುದರಿಂದ ಆರ್ಥಿಕ ಮತ್ತು ಕೈಗಾರಿಕೆ ಚಟುವಟಿಕೆಗಳಿಗೆ ನೆರವು ನೀಡಲಿದೆ ಎಂದರು.
ಈ ದಶಪಥ ಹೆದ್ದಾರಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರು, ಲೋಕಸಭಾ ಸದಸ್ಯರು ಒಂದಷ್ಟು ಸಲಹೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು. ಹೆದ್ದಾರಿ ಪೂರ್ಣಗೊಂಡರೆ 90 ನಿಮಿಷಗಳಲ್ಲಿ ಬೆಂಗಳೂರು - ಮೈಸೂರು ನಡುವೆ ಸಂಚಾರ ಮಾಡಬಹುದು. ಹೆದ್ದಾರಿಯಿಂದ ಮೈಸೂರು, ಶ್ರೀರಂಗಪಟ್ಟಣ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ. ನಾವು ಸಾಮೂಹಿಕ ಸಾರಿಗೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
ಈ ದಶಪಥದಿಂದ ರಾಮನಗರ ಹಾಗೂ ಮಂಡ್ಯ ಜಿಲ್ಲೆಗೆ ಕನೆಕ್ಟಿವಿಟಿ ಸುಗಮ ಆಗಲಿದೆ. ಈ ಪ್ರದೇಶದಲ್ಲಿ ಕೈಗಾರಿಕಾ ಪಟ್ಟಣಗಳ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ಇದರಿಂದ ಐಟಿ ಉದ್ಯಮಕ್ಕೆ ನೆರವು ದೊರೆಯಲಿದೆ ಎಂದು ಅವರು ಹೇಳಿದರು.