ಬೆಳಗಾವಿ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಭೆ ನಡೆಸುತ್ತಿರುವುದರಿಂದ ಜಿಲ್ಲೆಯ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಬೆಳಗಾವಿಯ ಹಿರೇಬಾಗೇವಾಡಿ ಹಾಗೂ ಕೊಗನೊಳ್ಳಿ ಚೆಕ್‌ಪೋಸ್ಟ್ ನಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಕರವೇ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದಾರೆ.
ಧಾರವಾಡದಿಂದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಬೆಳಗಾವಿಯತ್ತ ಧಾವಿಸುತ್ತಿದ್ದಾರೆ. ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ವಿವಿಧ ಕಡೆಯಿಂದ ಕಾರ್ಯಕರ್ತರು ಇನ್ನು ಕೆಲವೇ ಕ್ಷಣಗಳಲ್ಲಿ ಬೆಳಗಾವಿಗೆ ಆಗಮಿಸಲಿದ್ದಾರೆ. ಎಲ್ಲರನ್ನು ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ತಡೆದು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.