ಭಾರೀ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು, ನವೆಂಬರ್ 19: ರಾಜ್ಯದಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರವೂ ರಜೆ ಘೋಷಿಸಲಾಗಿದೆ.

"ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗಳ ಕಾರ್ಯನಿರ್ವಹಣೆ ಕುರಿತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರ್ಧರಿಸುವಂತೆ,," ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್. ಆರ್ ಆದೇಶ ಹೊರಡಿಸಿದ್ದಾರೆ.

"ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹವಾಮಾನವನ್ನು ಅವಲಂಬಿಸಿ ಸ್ಥಳೀಯ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಜೆ ಘೋಷಿಸಿದರೆ, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು," ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಶುಕ್ರವಾರ ನಗರದಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. "ಮಕ್ಕಳು ಶಾಲೆಗಳಿಗೆ ತೆರಳಲು ತೊಂದರೆ ಅನುಭವಿಸುತ್ತಾರೆ, ಇದರಿಂದಾಗಿ ನಾವು ಶಾಲೆಗಳನ್ನು ಒಂದು ದಿನದ ಮಟ್ಟಿಗೆ ಮುಚ್ಚುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ,'' ಎಂದು ಮಂಜುನಾಥ್ ತಿಳಿಸಿದರು.

ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳ ಪ್ರಕಾರ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ ಡಿಡಿಪಿಐ ಕೆ.ಎಂ. ಜಯರಾಮ ರೆಡ್ಡಿ ಮಾತನಾಡಿ, ಜಿಲ್ಲೆಯ ಶಾಲಾ- ಪಿಯು ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಾಲೆಗೆ ಹೋಗುವ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಕೂಡ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ಒಂದರಿಂದ ಹತ್ತನೇ ತರಗತಿಯವರೆಗೆ ಶುಕ್ರವಾರ ಮತ್ತು ಶನಿವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.