ಮಾಡಾಳ್ ವಿರೂಪಾಕ್ಷಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು?

ಮಾಡಾಳ್ ವಿರೂಪಾಕ್ಷಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು : ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಕರಣದ ವಿಚಾರಣೆ ನಡೆಸಲು ಲೋಕಾಯುಕ್ತಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ ನೀಡುವುದು ನಮ್ಮ ನೈತಿಕತೆ. ಮಾಡಿದ ತಪ್ಪುಗಳನ್ನು ಮುಚ್ಚಿಡುವುದು ಕಾಂಗ್ರೆಸ್ ನೈತಿಕತೆ' ಎಂದು ಅವರು ಹೇಳಿದರು.

ವಿರೂಪಾಕ್ಷಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ವಿಧಾನಸೌಧದಲ್ಲಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರಾ? ಆಗ ಲೋಕಾಯುಕ್ತ ಇದ್ದಿದ್ದರೆ ಸಚಿವರನ್ನು ಬಂಧಿಸುತ್ತಿದ್ದರು. ಆದರೆ, ಅಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಅವರು ಭ್ರಷ್ಟಾಚಾರ ವಿರೋಧಿ ಸಂಸ್ಥೆಯನ್ನು ದುರ್ಬಲಗೊಳಿಸಿದರು' ಎಂದು ಅವರು ಆರೋಪಿಸಿದರು.