KPCC ಸದಸ್ಯ ಎಸ್.ಗುರುಚರಣ್ ಗೆ ಕಾಂಗ್ರೆಸ್ ಟಿಕೆಟ್ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ - ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ ಸ್ಪಷ್ಟನೆ
ಮಂಡ್ಯ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಎಸ್.ಗುರುಚರಣ್ ಸ್ಪರ್ಧೆ ಮಾಡುವುದು ನಿಶ್ಚಯವಾಗಿದ್ದು ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ ಸ್ಪಷ್ಟಪಡಿಸಿದರು.
ಮದ್ದೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎಸ್. ಗುರುಚರಣ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗಾಗಲೇ ಹಲವು ಬಾರಿ ಘೋಷಣೆ ಮಾಡಿದ್ದು, ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಗಾಳಿಮಾತುಗಳಿಗೆ ಹಾಗೂ ಊಹಾಪೋಹಗಳಿಗೆ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರು ಕಿವಿಗೊಡಬಾರದೆಂದು ತಿಳಿಸಿದರು.
ಎಸ್.ಗುರುಚರಣ್ ಅವರು ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷ ಸಂಘಟಿಸಿ ಎರಡು ವಿಧಾನ ಪರಿಷತ್ ಚುನಾವಣೆಯಲ್ಲೂ ಶಕ್ತಿ ಮೀರಿ ಶ್ರಮಿಸಿ ಇಬ್ಬರು ಅಭ್ಯರ್ಥಿಗಳನ್ನು ಅಭೂತಪೂರ್ವ ಗೆಲುವಿಗೆ ಕಾರಣರಾಗಿದ್ದಾರೆ. ವಿಧಾನ ಸಭಾ ಚುನಾವಣೆಯಲ್ಲೂ ಕ್ಷೇತ್ರದ ಮತದಾರರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವುದು ನಿಶ್ಚಿತವಾಗಿದ್ದು, ಚುನಾವಣಾ ಪ್ರಚಾರಕ್ಕೆ (ಎಸ್.ಗುರುಚರಣ್ ಅವರ ದೊಡ್ಡಪ್ಪ) ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರು ಬರುವುದು ಖಚಿತ ಎಂದು ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.
ಸಮಾಜ ಸೇವಕ ಕದಲೂರು ಉದಯ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷದಿಂದ ಮುಂದಿನ ವಿಧಾನ ಸಭಾ ಚುನಾವಣೆಗೆ ಟಿಕೆಟ್ ತರುವುದಾಗಿ ಹೇಳುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದು, ಉದಯ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದಿಲ್ಲ ಮತ್ತು ಟಿಕೆಟ್ ಗೆ ಅರ್ಜಿಯನ್ನು ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಉದಯ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಕಾರಣಕ್ಕೂ ಟಿಕೆಟ್ ಘೋಷಣೆಯಾಗುವುದಿಲ್ಲ ಭವಿಷ್ಯ ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಿಸಾನ್ ಮೋರ್ಚಾ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ ಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ್ ಕಂಠಿ, ಜಿಲ್ಲಾ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ರಾಘವ, ಪುರಸಭಾ ಸದಸ್ಯೆ ಪ್ರಿಯಾಂಕ ಅಪ್ಪುಗೌಡ, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ್ ಬಾಬು, ತಾ.ಪಂ ಮಾಜಿ ಸದಸ್ಯೆ ಆಶಾಗೋಪಿ, ಮುಖಂಡರಾದ ಹೊಂಬಯ್ಯ, ಮುನಾವರ್ ಪಾಷಾ, ಅರುಣ್ ಕುಮಾರ್, ಪ್ರಶಾಂತ್, ಶಂಕರಲಿಂಗೇಗೌಡ, ಗೌತಮಿ, ಮಹೇಶ್, ಸೇರಿದಂತೆ ಇತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ