ರಮೇಶ ತಮ್ಮನನ್ನೇ ಸೋಲಿಸಿ ಬಿಜೆಪಿ ಗೆಲ್ಲಿಸಿದ್ದ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: 'ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ, ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರನ್ನು ಸೋಲಿಸಿ, ಬಿಜೆಪಿಯ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದನ್ನು ಮರೆಯಬಾರದು' ಎಂದು ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪಕ್ಷದ ಮುಖಂಡರಿಗೆ ತಿಳಿಸಿದರು.
ತಾಲ್ಲೂಕಿನ ರಿಜೆಂಟ ರೆಸಾರ್ಟ್‌ನಲ್ಲಿ ಸೋಮವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
'ಪ್ರಚಾರಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಹಾಗೆ ಮಾಡುತ್ತಿದ್ದಾರೆ, ಹೀಗೆ ಮಾಡುತ್ತಿದ್ದಾರೆ ಎಂದು ಬಿಂಬಿತವಾಗುತ್ತಿದೆ. ಅವರುತಮ್ಮನನ್ನೇ ಸೋಲಿಸಿದರು. ಈ ಚುನಾವಣೆಯಲ್ಲೂ ನಾವು ಪ್ರಾಮಾಣಿಕವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದೇವೆ' ಎಂದು ಸಮರ್ಥಿಸಿಕೊಂಡರು.
'ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ಸೋಲಿಸಿ ಎನ್ನುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ? ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೋಕಾಕದಲ್ಲಿ ಪಕ್ಷಕ್ಕೆ ಮುನ್ನಡೆ ಬಾರದಿದ್ದಿದ್ದರೆ ಪಕ್ಷದ ಅಭ್ಯರ್ಥಿ ಮಂಗಲಾ ಅಂಗಡಿ ಗೆಲ್ಲುತ್ತಿರಲಿಲ್ಲ' ಎಂದು ತಿಳಿಸಿದರು.