ಕಲಬುರ್ಗಿ: ರಸಗೊಬ್ಬರ ಬೆಲೆ ಏರಿಸಿರುವ ಕೇಂದ್ರದ ಕ್ರಮವನ್ನು ವಿರೋಧಿಸಿರುವ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಈ ಕೂಡಲೇ ರಸಗೊಬ್ಬರ ಬೆಲೆ ಇಳಿಸುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಪತ್ರ ಬರೆದಿರುವ ಶಾಸಕರು ಕಳೆದ ವರ್ಷ ನೆರೆ ಪ್ರವಾಹದಿಂದ ರಾಜ್ಯದ ರೈತರು ತೀವ್ರ ನಷ್ಟ ಅನುಭವಿಸಿದ್ದರು. ಅಲ್ಲದೇ, ಕೊರೊನಾ ಲಾಕ್‌ಡೌನ್‌ನಿಂದಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಮಾರುಕಟ್ಟೆಯೂ ಲಭಿಸಿರಲಿಲ್ಲ. ಜೊತೆಗೆ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದ್ದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸಿದ್ದರು. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಂಪನಿಗಳು ರಸಗೊಬ್ಬರ ದರ ಏರಿಕೆ ಮಾಡಿದ್ದರೂ ಹಳೆ ದರದಲ್ಲಿಯೇ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ತನ್ನ ಮಾತು ತಪ್ಪಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ರಸಗೊಬ್ಬರ ಬೆಲೆಯಲ್ಲಿ ಸ್ಥಿರತೆ ಸಾಧಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು ಹೇಳಿದ್ದರು. ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಎಲ್ಲಾ ರಸಗೊಬ್ಬರ ಗಳ ಬೆಲೆ ಶೇ 42ರಿಂದ ಶೇ 58ರಷ್ಟು ಏರಿಕೆಯಾಗಿದೆ.
ಕೊರೊನಾ ಸಾಂಕ್ರಾಮಿಕದ ಈ ವಿಷಮ ಪರಿಸ್ಥಿತಿಯಲ್ಲಿ ರೈತರು ತುಂಬಾ ಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ಈ ಕೂಡಲೇ ರಸಗೊಬ್ಬರ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್ ಒತ್ತಾಯಿಸಿದ್ದಾರೆ.