ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಶಾಸಕಾಂಗ ನಿರ್ಧಾರ

ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿ ಹೋರಾಟ ನಡೆಸಲು ಇಂದಿಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧರಿಸಿದೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಇದನ್ನು ಪಕ್ಷದ ಎಲ್ಲಾ ಶಾಸಕರು ಒಗ್ಗೂಡಿ ಎದುರಿಸಲು ಮುಂದಾಗೋಣ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಶಾಸಕರಿಗೆ ಸಲಹೆ ನೀಡಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ಅವರು, ಮತಾಂತರ ಕಾಯ್ದೆ ವಿರೋಧಿಸಲು ನಿರ್ಧರಿಸಲಾಗಿದೆ ಇದೊಂದು ಭಾವನಾತ್ಮಕ ವಿಷಯ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಸರ್ಕಾರ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ. ರಾಜಕೀಯ ಕಾರಣಕ್ಕಾಗಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಲು ಹೊರಟಿದೆ ಎಂದು ತಮ್ಮ ಪಕ್ಷದ ಶಾಸಕರಿಗೆ ಅವರು ಸೂಚಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಬಿಜೆಪಿ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯಿದೆಯನ್ನು ವಿರೋಧಿಸಬೇಕಿದೆ ಎಂದು ಅವರು ಶಾಸಕರಿಗೆ ಸೂಚನೆ ನೀಡಿದರು. ಅಧಿವೇಶನದಲ್ಲಿ ಮತಾಂತರ ತಡೆ ಕಾಯ್ದೆ ಮಂಡನೆಗೆ ಅವಕಾಶ ನೀಡದೆ ಸದನದಲ್ಲಿ ಹೋರಾಟ ನಡೆಸುವ ಜತೆಗೆ ಎಪಿಎಂಸಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯಲು ಹೋರಾಟ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮತಾಂತರ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುವ ತೀರ್ಮಾನ ಕೈಗೊಳ್ಳಲಾಯಿತು. ಹಾಗೆಯೇ ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಹೋರಾಟ ನಡೆಸುವ ಬಗ್ಗೆಯೂ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಯಿತು. ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಎತ್ತಿ ತೋರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿದರು. ಇದೆಲ್ಲದರ ಜತೆಗೆ ಬಿಟ್ ಕಾಯಿನ್ ಹಗರಣವನ್ನು ಪ್ರಸ್ತಾಪಿಸುವ ಬಗ್ಗೆಯೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾಮಗಾರಿಗಳಲ್ಲಿ ಶೇ. 40 ರಷ್ಟು ಕಮಿಷನ್ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ತನಿಖೆಗೆ ಪಟ್ಟು ಹಿಡಿಯುವ ಬಗ್ಗೆಯೂ ಚರ್ಚೆಗಳು ನಡೆದವು.