ವಿಜಯಪುರ: ಸಿಂದಗಿ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ಸಾವು

ವಿಜಯಪುರ: ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜ್ಯಾಳ(54) ಶುಕ್ರವಾರ ತಡ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅವರು, ಚುನಾವಣೆಗೆ ಸಾಕಷ್ಟು ತಯಾರಿ ನಡೆಸಿದ್ದರು.
ಶುಕ್ರವಾರ ವಿಜಯಪುರ ನಗರ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆ, ಸಮಾವೇಶದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಪಾಲ್ಗೊಂಡಿದ್ದರು.
ಪಕ್ಷದ ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.ತಡ ರಾತ್ರಿ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಸೋಮಜ್ಯಾಳ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯಾಘಾತದಿಂದ ಅವರು ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
16 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು ಮೂಲ ಬಿಜೆಪಿಯವರಾಗಿದ್ದರು. ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾಗಿ, ವಿಧಾನ ಸಭೆ ಚುನಾವಣೆಗೆ ಟಿಕೆಟ್ ಗಿಟ್ಟಿಸಿದ್ದರು.
ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಸೋಮಜ್ಯಾಳ ಗ್ರಾಮದವರಾಗಿದ್ದ ಅವರು, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಸಂತಾಪ
ಶಿವಾನಂದ ಪಾಟೀಲ ಅವರ ಅಕಾಲಿಕ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
'ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.