ಸಿದ್ಧರಾಮಯ್ಯ, ಎಂ.ಬಿ ಪಾಟೀಲ್ ವಿರುದ್ಧ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಈ ಸಮಯದಲ್ಲಿ ಯಾವುದೇ ಪಕ್ಷದ ವಿರುದ್ಧ, ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕವಾಗಿ ನಿಂದಿಸುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ. ಹೀಗಿದ್ದೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಅಸಮರ್ಥ, ಅವಿವೇಕಿ ಎಂಬುದಾಗಿ ನಿಂದಿಸಿದ್ದಾರೆ ಎಂಬುದಾಗಿ ಆರೋಪಿಸಿ, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇಂದು ರಾಜ್ಯ ಚುನಾವಣಾ ಆಯೋಗಕ್ಕೆ ತೆರಳಿದಂತ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ಅವರು, ಸಿದ್ಧರಾಮಯ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಅಸಮರ್ಥ, ಅವಿವೇಕಿ ಎಂಬುದಾಗಿ ವೈಯಕ್ತಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿಯಿಂದ ದುರಾಡಳಿತವೆಂದು ಸರ್ಕಾರವನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ನಿಂದಿಸಿದ್ದಾರೆ. ಬಿಜೆಪಿ, ಆರ್ ಎಸ್ ಎಸ್ ಬಗ್ಗೆಯೂ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ವೈಯಕ್ತಿಕವಾಗಿ ನಿಂದನೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿದ ಮಾಜಿ ಸಚಿವ ಜನಾರ್ಧನರೆಡ್ಡಿ
ಬೆಳಗಾವಿ: ಚುನಾವಣೆಯ ಹೊತ್ತಿನಲ್ಲಿ ಮತದಾರರಿಗೆ ಯಾವುದೇ ಪಕ್ಷದ ಅಭ್ಯರ್ಥಿಗಳು, ಯಾವುದೇ ಆಮಿಷ ಒಡ್ಡುವಂತಿಲ್ಲ ಎನ್ನುವುದು ನಿಯಮ. ಇದರ ಹೊರತಾಗಿ ಭರವಸೆ, ಆಮಿಷ ಒಡ್ಡೋದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ. ಇದರ ನಡುವೆ ಮಾಜಿ ಸಚಿವ ಜನಾರ್ಧನರೆಡ್ಡಿ ಮಾತ್ರ ಕ್ಷೇತ್ರದ ಮಹಿಳೆಯರಿಗೆ ಹೊಲಿಗೆ ತರಬೇತಿಗಾಗಿ ಹೊಲಿಗೆ ಯಂತ್ರ ತರಬೇತಿ ಕೇಂದ್ರ ಸ್ಥಾಪಿಸೋದಾಗಿ ಭರವಸೆ ನೀಡಿದ್ದಾರೆ. ಈ ಮೂಲಕ ನೀತಿ ಸಂಹಿತೆ ಉಲ್ಲಂಘಿನೆಯ ಆರೋಪ ಕೇಳಿ ಬಂದಿದೆ.
ಬೆಳಗಾವಿಯ ಕುಡಚಿ ಕ್ಷೇತ್ರದ ಹಾರೊಗೇರಿಯ ಪಟ್ಟಣ ಪುರಸಭೆಯ ಆವರಣದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಭಾಗವಹಿಸಿದಂತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ಧನ ರೆಡ್ಡಿಯವರು, 5 ಕೋಟಿ ರೂ ವೆಚ್ಚದಲ್ಲಿ ಹೊಲಿಗೆ ಯಂತ್ರ ತರಬೇತಿ ಕೇಂದ್ರವನ್ನು ಆರಂಭಿಸಲಾಗುತ್ತದೆ. ಕ್ಷೇತ್ರದ ಪ್ರತಿಯೊಬ್ಬ ಮಹಿಳೆಯರಿಗೂ ಹೊಲಿಗೆ ಯಂತ್ರ ಕೊಡಿಸುತ್ತೇನೆ. ಇದರಿಂದ ಪ್ರತಿ ತಿಂಗಳು 35-40 ಸಾವಿರ ಗಳಿಸಬಹುದು ಎಂದರು.
ಕೆ ಆರ್ ಪಿ ಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರು ಕ್ಷೇತ್ರದ ಮಹಿಳೆಯರಿಗೆ ಹೊಲಿಗೆ ಯಂತ್ರ ತರಬೇತಿ, ಹೊಲಿಗೆ ಯಂತ್ರ ಕೊಡಿಸುವುದಾಗಿ ಹೇಳುವ ಮೂಲಕ ಆಮಿಷ ಒಡ್ಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಜನಾರ್ಧನ ರೆಡ್ಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಚುನಾವಣಾಧಿಕಾರಿಗಳು ಸ್ಪಷ್ಟ ಪಡಿಸಬೇಕಿದೆ.
ಬಿಜೆಪಿ ಮಾಜಿ ಶಾಸಕ ಎನ್.ವೈ ಗೋಪಾಲಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಕೂಡ್ಲಿಗಿ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದು, ಶಾಸಕರಾಗಿದ್ದಂತ ಎನ್ ವೈ ಗೋಪಾಲಕೃಷ್ಣ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರ ಕೂಡ ಆಗಿದೆ. ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕೂಡ್ಲಿಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಂಎಲ್ಸಿಗಳಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಜೆ ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.