ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಶಾಸಕಿ ರೂಪಾಲಿ ನಾಯ್ಕ ಒತ್ತಾಯ

ಹೊಸದಿಗಂತ ವರದಿ, ಅಂಕೋಲಾ:
ಜಿಲ್ಲೆಯ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಕಾರವಾರ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರು ಸದನದಲ್ಲಿ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ, ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸಮಾಜ ತೀರ ಹಿಂದುಳಿದ ಬುಡಕಟ್ಟು ಸಮುದಾಯವಾಗಿದ್ದು ಆರ್ಥಿಕವಾಗಿ ಬಡತನದ ಜೀವನ ನಡೆಸುತ್ತಿದ್ದಾರೆ.
ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ನಡೆದ ಕುಲಶಾಸ್ತ್ರೀಯ ಅಧ್ಯಯನದ ವರದಿಗೆ ಸಂಬಂಧಿಸಿದಂತೆ ಕೇಳಲಾದ ಸ್ಪಷ್ಟೀಕರಣದ ಕುರಿತಂತೆ ಅಧ್ಯಯನ ನಡೆಸಿ ವರದಿ ಸಿದ್ಧವಾಗಿದ್ದು ಅದನ್ನು ಕೇಂದ್ರಕ್ಕೆ ಸಲ್ಲಿಸಲು ತ್ವರಿತ ಕ್ರಮಕ್ಕೆ ಶಾಸಕಿ ರೂಪಾಲಿ ನಾಯ್ಕ ಆಗ್ರಹಿಸಿದರು.
ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಸುಮಾರು 46 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಇರುವ ಬುಡಕಟ್ಟು ಹಾಲಕ್ಕಿ ಸಮಾಜದ ನ್ಯಾಯಯುತ ಬೇಡಿಕೆಗಳು ಈಡೇರಿಸಲು ಸರ್ಕಾರ ಕೂಡಲೇ ಸ್ಪಂದಿಸುವ ಆಶಯವನ್ನು ಶಾಸಕಿ ರೂಪಾಲಿ ನಾಯ್ಕ ವಿಧಾನಸಭೆಯಲ್ಲಿ ವ್ಯಕ್ತಪಡಿಸಿದರು.
ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಸಿಎಂ ಗೆ ಮನವಿ :
ಬಡತನದ ನಡುವೆ ಸ್ವಾಭಿಮಾನದ ಬದುಕು ನಡೆಸುತ್ತಿರುವ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತ ಬೇಡಿಕೆಗೆ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸುತ್ತಿದ್ದು, ಇತ್ತೀಚೆಗೆ ನೀಡಲಾಗಿರುವ ಅಧ್ಯಯನದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಮುಖ್ಯ ಮಂತ್ರಿಗಳಿಗೆ ಮನವಿ ಮಾಡಲಾಗಿದೆ.