ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಣೆ ಪ್ರಸ್ತಾವನೆ ಮುಂದೂಡಿಕೆ

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಣೆ ಪ್ರಸ್ತಾವನೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರಿನ ಹೆಸರುಘಟ್ಟ ಹುಲ್ಲುಗಾವಲು ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶವೆಂದು ಘೋಷಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಪರಿಸರ ಪ್ರೇಮಿಗಳಿಗೆ ಮತ್ತೆ ನಿರಾಶೆಯಾಗಿದೆ. ಅರಣ್ಯ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವ ಮಂಡಳಿ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತು.

ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ಸಾರ್ವಜನಿಕರ ಅಹ್ವಾಲು ಸ್ವೀಕರಿಸಬೇಕು. ಸಾರ್ವಜನಿಕರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಮಂಡಳಿ ಸದಸ್ಯರೊಬ್ಬರು ಖಚಿತ ಪಡಿಸಿದ್ದಾರೆ.

ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶವೆಂದು ಘೋಷಣೆ ಪ್ರಸ್ತಾವನೆಯನ್ನು ಸಭೆಯಲ್ಲಿ ಈಗಾಗಲೇ ಎರಡು ಬಾರಿ ಮಂಡಿಸಲಾಗಿದೆ. ಅಲ್ಲದೆ, ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಆದರೂ, ಸಾರ್ವಜನಿಕರ ಅಹವಾಲು ಸ್ವೀಕರಿಸಬೇಕು ಎಂಬ ಕಾರಣ ನೀಡಿ ಪ್ರಸ್ತಾವನೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.