ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎಫ್) ವತಿಯಿಂದ ಶನಿವಾರ (ನ.12) ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಾರ್ವಜನಿಕರು ಲೋಕ ಅದಾಲತ್ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದ್ದು, ಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹೈಕೋರ್ಟ್ ಕಾನೂನು ಸೇವಾ ಸಮಿತಿ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು.
ಈ ಕುರಿತು ಕೆಎಸ್ಎಲ್ಎಸ್ಎಫ್ ಸದಸ್ಯ ಕಾರ್ಯದರ್ಶಿ ಜೈಶಂಕರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅದಾಲತ್ನಲ್ಲಿ ಭಾಗವಹಿಸಲು ಇಚ್ಛಿಸುವವರು ನ.10ರವರೆಗೆ ಪ್ರಾಧಿಕಾರ ನಡೆಸುವ ಸಂಧಾನ ಪೂರ್ವ ಸಭೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ, ಉದ್ಯೋಗ ಮರುಸ್ಥಾಪನೆಗೆ ಸಂಬಂಧಿಸಿದ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್ಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಬಂಧಿಸಿದ ಕೇಸ್ಗಳು, ಸಾಲ ವಸೂಲಾತಿ ನ್ಯಾಯ ಮಂಡಳಿ, ವೈವಾಹಿಕ/ಕೌಟುಂಬಿಕ ಪ್ರಕರಣ (ವಿಚ್ಛೇದನ ಹೊರತುಪಡಿಸಿ), ಚೆಕ್ ಅಮಾನ್ಯ ಪ್ರಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂಸ್ವಾಧಿನ, ವೇತನ-ಭತ್ಯೆ ಮತ್ತು ಪಿಂಚಣಿ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಅದಾಲತ್ನಲ್ಲಿ ಪರಿಗಣಿಸಲಾಗುತ್ತದೆ.